ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಸಮರ ತಾರಕಕ್ಕೇರಿದ್ದು, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವಿರುದ್ಧ ಭೀಕರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಆಪ್ತ ಸಹಾಯಕರ ಭೀಕರ ಹತ್ಯೆಯಿಂದ ಕೆರಳಿರುವ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮರುಕ್ಷಣವೇ ಈ ಅರಾಜಕತೆಗೆ ಅಂತ್ಯ ಹಾಡುತ್ತೇವೆ ಮತ್ತು ಟಿಎಂಸಿ ಗೂಂಡಾಗಳನ್ನು ಮಟ್ಟ ಹಾಕುತ್ತೇವೆ ಎಂದು ಸಿಂಹ ಗರ್ಜನೆ ಮಾಡಿದ್ದಾರೆ.
ಮೂಲಗಳ ಪ್ರಕಾರ, ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮ್ ಪ್ರದೇಶದ ದೊಹರಿಯಾದಲ್ಲಿ ಈ ಘಟನೆ ನಡೆದಿದೆ. ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ 41 ವರ್ಷದ ಚಂದ್ರನಾಥ್ ರಥ್ ಅವರು ಸಾರ್ವಜನಿಕ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ, ಮೊದಲೇ ಹೊಂಚು ಹಾಕಿ ಕುಳಿತಿದ್ದ ಹಂತಕರು ಅವರ ಮೇಲೆ ಗುಂಡಿನ ಮಳೆ ಕರೆದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ರಥ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಈ ಘಟನೆಯನ್ನು ನಿರ್ದಯಿ ಮತ್ತು ಪೂರ್ವನಿಯೋಜಿತ ಕೊಲೆ ಎಂದು ಕರೆದಿರುವ ಸುವೇಂದು ಅಧಿಕಾರಿ, ಇದು ಕೇವಲ ಆಕಸ್ಮಿಕವಲ್ಲ ಎಂದು ಕಿಡಿಕಾರಿದ್ದಾರೆ. ಹಂತಕರು ಕಳೆದ ಎರಡು ಮೂರು ದಿನಗಳಿಂದ ಚಂದ್ರನಾಥ್ ರಥ್ ಅವರ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದರು. ಈ ಕೊಲೆಗೆ ಸಂಪೂರ್ಣವಾಗಿ ಸ್ಕೆಚ್ ಹಾಕಲಾಗಿತ್ತು. ಬಂಗಾಳ ಪೊಲೀಸ್ ಮಹಾನಿರ್ದೇಶಕರು ಕೂಡ ಇದೊಂದು ಯೋಜಿತ ಕೃತ್ಯ ಎಂದು ಒಪ್ಪಿಕೊಂಡಿದ್ದಾರೆ ಎಂದು ಅವರು ಮಾಧ್ಯಮಗಳ ಮುಂದೆ ಗುಡುಗಿದ್ದಾರೆ.
ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ ಸುವೇಂದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಟೀಕಿಸಿದರು. ಇದು ಟಿಎಂಸಿಯ ಮಹಾಜಂಗಲ್ ರಾಜ್ ಗೆ ನೇರ ಸಾಕ್ಷಿಯಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇಂತಹ ಕ್ರೂರಿಗಳನ್ನು ಮತ್ತು ಅಪರಾಧಿಗಳನ್ನು ನಿರ್ನಾಮ ಮಾಡುವುದು ಖಚಿತ. ಅಲ್ಲಿಯವರೆಗೆ ಬಿಜೆಪಿ ಕಾರ್ಯಕರ್ತರು ಶಾಂತಿಯಿಂದಿರಬೇಕು ಮತ್ತು ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ಈ ಭೀಕರ ಹತ್ಯೆಯ ಕುರಿತು ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ. ಕೇಂದ್ರ ಸಚಿವೆ ಸುಕಾಂತ ಮಜುಂದಾರ್ ಅವರು ಈಗಾಗಲೇ ಮೃತರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಸದ್ಯ ಪೊಲೀಸರು ಘಟನಾ ಸ್ಥಳದಲ್ಲಿ ಪ್ರಮುಖ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಹಂತಕರ ಪತ್ತೆಗಾಗಿ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಈ ಘಟನೆಯು ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಬಿಜೆಪಿ ಮತ್ತು ಟಿಎಂಸಿ ನಡುವಿನ ಸಂಘರ್ಷ ಮತ್ತಷ್ಟು ಉಲ್ಬಣಗೊಳ್ಳುವ ಲಕ್ಷಣಗಳು ಕಾಣುತ್ತಿವೆ.







