ಹುಬ್ಬಳ್ಳಿ: ಸಚಿವ ಪ್ರಿಯಾಂಕ್ ಖರ್ಗೆಯವರು ಕೇವಲ ಪ್ರಚಾರಕ್ಕಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ವಿರುದ್ಧ ಅನಗತ್ಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಮತ್ತು ಭೀಮ್ ಆರ್ಮಿ ರ್‍ಯಾಲಿಗೆ ಒಂದೇ ದಿನ ಅನುಮತಿ ಕೇಳಿರುವುದಕ್ಕೆ ನಮ್ಮ ಯಾವುದೇ ತಕರಾರಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಭೀಮ್ ಆರ್ಮಿ ರ್‍ಯಾಲಿಗೆ ನಮ್ಮ ಸ್ವಾಗತವಿದೆ
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಿಯಾಂಕ್ ಖರ್ಗೆ ಅವರಿಗೆ ಆರ್‌ಎಸ್‌ಎಸ್ ಬಗ್ಗೆ ಮಾತನಾಡುವುದು ಒಂದು ಚಟವಾಗಿಬಿಟ್ಟಿದೆ. ಅವರಿಗೆ ಪ್ರಚಾರದ ಗೀಳು ಹೆಚ್ಚಾಗಿದ್ದು, ಅದಕ್ಕಾಗಿ ಸಂಘವನ್ನು ಗುರಿಯಾಗಿಸಿಕೊಂಡಿದ್ದಾರೆ. ಚಿತ್ತಾಪುರದಲ್ಲಿ ನವೆಂಬರ್ 2 ರಂದು ಪಥಸಂಚಲನ ನಡೆಸಲು ಆರ್‌ಎಸ್‌ಎಸ್ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದೆ. ಅದೇ ದಿನದಂದು ಭೀಮ್ ಆರ್ಮಿ ಸಂಘಟನೆಯವರೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ರ್‍ಯಾಲಿ ನಡೆಸಲು ಅನುಮತಿ ಕೋರಿದ್ದಾರೆ. ಇದಕ್ಕೆ ನಮ್ಮ ಯಾವುದೇ ವಿರೋಧವಿಲ್ಲ” ಎಂದು ಹೇಳಿದರು.
“ಸೌಹಾರ್ದಯುತವಾಗಿ, ಕಾನೂನಿನ ಚೌಕಟ್ಟಿನಲ್ಲಿ ಮೆರವಣಿಗೆ ಮಾಡಲು ಪ್ರತಿಯೊಂದು ಸಂಘಟನೆಗೂ ಹಕ್ಕಿದೆ. ಡಾ. ಅಂಬೇಡ್ಕರ್ ಅವರ ಹೆಸರಿನಲ್ಲಿ ರ್‍ಯಾಲಿ ಮಾಡುವುದನ್ನು ನಾವು ಸ್ವಾಗತಿಸುತ್ತೇವೆ. ಯಾರಿಗೆ, ಯಾವಾಗ ಅನುಮತಿ ನೀಡಬೇಕು ಎನ್ನುವುದು ಜಿಲ್ಲಾಡಳಿತದ ವಿವೇಚನೆಗೆ ಬಿಟ್ಟ ವಿಚಾರ. ಜಿಲ್ಲಾಡಳಿತವು ಯಾವ ದಿನಾಂಕವನ್ನು ನಿಗದಿಪಡಿಸುತ್ತದೆಯೋ, ಅಂದೇ ಆರ್‌ಎಸ್‌ಎಸ್ ತನ್ನ ಪಥಸಂಚಲನವನ್ನು ಶಿಸ್ತುಬದ್ಧವಾಗಿ ನಡೆಸಲಿದೆ” ಎಂದು ಜೋಶಿ ತಿಳಿಸಿದರು.
ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಯಾವುದೇ ಗೊಂದಲವಿಲ್ಲ
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ವಿಚಾರದಲ್ಲಿ ಎದ್ದಿರುವ ಊಹಾಪೋಹಗಳಿಗೆ ತೆರೆ ಎಳೆದ ಪ್ರಹ್ಲಾದ ಜೋಶಿ, “ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಕೇಂದ್ರ ಸರ್ಕಾರದ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಇತ್ತೀಚೆಗೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಕುಮಾರಸ್ವಾಮಿಯವರ ಆರೋಗ್ಯ ಸರಿ ಇರಲಿಲ್ಲ, ಹೀಗಾಗಿ ಆರೋಗ್ಯ ವಿಚಾರಿಸಲು ಮತ್ತು ದೀಪಾವಳಿ ಹಬ್ಬದ ಶುಭಾಶಯ ಕೋರಲು ಅದೊಂದು ಸೌಹಾರ್ದಯುತ ಭೇಟಿ ಅಷ್ಟೇ,” ಎಂದರು.
“ಜೆಡಿಎಸ್ ಮತ್ತು ಬಿಜೆಪಿ ನಡುವೆ ಸಮನ್ವಯದ ಕೊರತೆಯೂ ಇಲ್ಲ. ಎಲ್ಲವೂ ಸುಸೂತ್ರವಾಗಿದೆ. ಒಂದು ವೇಳೆ ಕೇಂದ್ರದ ಜೊತೆ ಏನಾದರೂ ಭಿನ್ನಾಭಿಪ್ರಾಯಗಳಿದ್ದರೆ ಅದನ್ನು ಬಗೆಹರಿಸಲು ಕೇಂದ್ರದ ನಾಯಕರೇ ಇದ್ದಾರೆ. ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಒಗ್ಗಟ್ಟಾಗಿ ಹೋರಾಡಬೇಕು ಎಂಬ ಕುಮಾರಸ್ವಾಮಿ ಅವರ ಹೇಳಿಕೆಗೆ ನನ್ನ ಸಂಪೂರ್ಣ ಸಹಮತವಿದೆ. ನಮ್ಮ ಮೈತ್ರಿ ಗಟ್ಟಿಯಾಗಿದೆ,” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಜಿಎಸ್‌ಟಿ ಬಗ್ಗೆ ಸಿದ್ದರಾಮಯ್ಯ ಅಪಪ್ರಚಾರ
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹರಿಹಾಯ್ದ ಜೋಶಿ, “ಜಿಎಸ್‌ಟಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿದ್ದರಾಮಯ್ಯನವರು ನಿರಂತರವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ತಮ್ಮ ಸರ್ಕಾರದ ಆರ್ಥಿಕ ದುಸ್ಥಿತಿಯನ್ನು ಮುಚ್ಚಿಹಾಕಲು ಮತ್ತು ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಇದಾಗಿದೆ” ಎಂದು ಆರೋಪಿಸಿದರು.








