ಅಕ್ಟೋಬರ್ 4 ರಿಂದ ಶಿಕ್ಷಕರ ಅರ್ಹತಾ ಪರೀಕ್ಷೆ
ಬೆಂಗಳೂರು, ಅಗಸ್ಟ್ 18: ಅಕ್ಟೋಬರ್ 4ರಂದು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೊರೋನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಪರೀಕ್ಷೆ ನಡೆಸಲಾಗುವುದು . ಈ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪೂರ್ವ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಸಚಿವರು ತಿಳಿಸಿದ್ದಾರೆ.
ಸಚಿವ ಸುರೇಶ್ಕುಮಾರ್ ಸೋಮವಾರ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಸಿಕೊಳ್ಳುವ ಕುರಿತಂತೆ ಚರ್ಚೆ ನಡೆಸಿದರು.
ಪೂರ್ವ ಬಾಲ್ಯಾವಸ್ಥೆಯ ಶಿಕ್ಷಣ, ಮೂಲಸಾಕ್ಷರತೆ ಮತ್ತು ಸಂಖ್ಯಾಜ್ಞಾನ, ಶಾಲೆಯಿಂದ ಹೊರಗುಳಿದ ಮಕ್ಕಳ ಪ್ರಮಾಣ ಕಡಿತಗೊಳಿಸುವುದು, ಶಾಲಾ ಪಠ್ಯಕ್ರಮ ಮಾದರಿ, ಗುಣಮಟ್ಟದ ಶಿಕ್ಷಣ-ಶಿಕ್ಷಕರ ಸೇವೆಗಳು, ಪರಿಣಾಮಕಾರಿ ಆಡಳಿತ ವ್ಯವಸ್ಥೆ, ನಿಯಂತ್ರಣಾ ವ್ಯವಸ್ಥೆ ಸೇರಿದಂತೆ ಹಲವಾರು ವಿಚಾರಗಳನ್ನು ಸಚಿವರು ಚರ್ಚಿಸಿದರು.
ಶಾಲಾ ಶಿಕ್ಷಣದ ವಿವಿಧ ಘಟ್ಟಗಳು ಎದುರಿಸುತ್ತಿರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ, ಮುಂದಿನ ಎರಡು ದಶಕಗಳ ಶೈಕ್ಷಣಿಕ ಕ್ಷೇತ್ರದ ಅವಕಾಶಗಳನ್ನು ಗಮನದಲ್ಲಿಟ್ಟುಕೊಂಡು ಸಮಗ್ರ ನೀತಿ ನಿರೂಪಣೆಗೆ ಮುಂದಾಗಬೇಕೆಂದು ಸುರೇಶ್ ಕುಮಾರ್ ಹೇಳಿದರು.