ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್ ಬಳಿಯ ಬೈಸರನ್ ಕಣಿವೆಯಲ್ಲಿ ಮಂಗಳವಾರ ಸಂಜೆ ಭೀಕರ ಉಗ್ರ ದಾಳಿ ನಡೆದಿದೆ. ಪ್ರವಾಸಕ್ಕೆ ಬಂದಿದ್ದವರ ಗುಂಪಿನ ಮೇಲೆ ದುಷ್ಕರ್ಮಿಗಳು ತೀವ್ರ ಗುಂಡಿನ ದಾಳಿ ನಡೆಸಿದ ಪರಿಣಾಮ, ಶಿವಮೊಗ್ಗದ ನಿವಾಸಿ ಮಂಜುನಾಥ್ ಸೇರಿದಂತೆ 28ಕ್ಕೂ ಹೆಚ್ಚಿನ ಪ್ರವಾಸಿಗರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಈ ದಾಳಿಯಲ್ಲಿ ಸುಮಾರು 25 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಗಾಯಾಳುಗಳಲ್ಲಿ ಒಬ್ಬರು ಕನ್ನಡಿಗರಾಗಿದ್ದಾರೆಂದು ಸ್ಥಳೀಯ ಮೂಲಗಳು ತಿಳಿಸಿವೆ. ಗಾಯಗೊಂಡವರನ್ನು ಪಹಲ್ಲಾಮ್‌ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಯ ಬಳಿಕ ಭದ್ರತಾ ಪಡೆಗಳು ಪ್ರದೇಶವನ್ನು ಶೋಧಮಾಡುತ್ತಿದ್ದು, ಉಗ್ರರಿಗಾಗಿ ತೀವ್ರ ಕಾರ್ಯಾಚರಣೆ ನಡೆಯುತ್ತಿದೆ.
ಘಟನೆಯ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಪ್ರದೇಶವಾದ ಬೈಸರನ್ ಕಣಿವೆಯಲ್ಲಿ ಭದ್ರತೆ ನಿಯೋಜಿಸಲಾಗಿದ್ದು, ಪ್ರವಾಸಿಗರಿಗೆ ಎಚ್ಚರಿಕೆ ನೀಡಲಾಗಿದೆ. ಈ ದಾಳಿ ಕುರಿತಾಗಿ ಕೇಂದ್ರ ಗೃಹ ಸಚಿವಾಲಯ ಹಾಗೂ ಸೇನಾ ಉನ್ನತ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ. ಮತ್ತಷ್ಟು ವಿವರಗಳು ನಿರೀಕ್ಷೆಯಲ್ಲಿವೆ.








