ಹುಬ್ಬಳ್ಳಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ನರ್ಸ್, ಪೊಲೀಸರು, ಪೌರಕಾರ್ಮಿಕರು ಹಾಗೂ ಮಾಧ್ಯಮದವರಿಗೆ ಗೌರವ ಸಲ್ಲಿಸುವ ಸಲುವಾಗಿ ನಗರದ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ಮರಳು ಶಿಲ್ಪವನ್ನು ನಿರ್ಮಿಸಲಾಗಿದೆ. ಒಂದು ಲೋಡ್ ಮರಳಿನಲ್ಲಿ ಕಲಾವಿದ ಮಂಜುನಾಥ್ ಹಿರೇಮಠ ಅವರು ಈ ಕಲಾಕೃತಿಯನ್ನು ರಚನೆ ಮಾಡಿದ್ದಾರೆ. ಈ ಶಿಲ್ಪವನ್ನು ಇಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ವೀಕ್ಷಿಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೈದ್ಯರು, ದಾದಿಯರು, ಆಶಾ ಕಾರ್ಯಕರ್ತೆರು, ದಿನದ 24 ಗಂಟೆ ಕೆಲಸ ನಿರ್ವಹಿಸುತ್ತಿದ್ದಾರೆ. ಕೊರೊನಾ ಸೋಂಕಿತರ ಹಾಗೂ ಪ್ರಾಥಮಿಕ ಹಂತದ ಸಂಪರ್ಕಕ್ಕೆ ಬಂದವರ ವಿವರವನ್ನು ಕಲೆಹಾಕುವ ಕಾರ್ಯದಲ್ಲಿ ತೊಡಗಿದ್ದಾರೆ. ವೈದ್ಯರು ಜೀವದ ಹಂಗು ತೊರೆದು ಕೋವಿಡ್-19 ರೋಗಿಗಳ ಚಿಕಿತ್ಸೆ ಮಾಡುತ್ತಿದ್ದಾರೆ. ಕಿಮ್ಸ್ ವೈದ್ಯರ ಪರಿಶ್ರಮದಿಂದಾಗಿ ಕೋವಿಡ್-19 ಇಬ್ಬರು ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇನ್ನು ಧಾರವಾಡ ಜಿಲ್ಲಾಡಳಿತ, ಪೊಲೀಸರು, ಪಾಲಿಕೆ ಪೌರಕಾರ್ಮಿಕರು ಕೂಡ ಸಮರ್ಪಣಾ ಭಾವದಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಇವರ ಕಾರ್ಯಕ್ಕೆ ಸರ್ಕಾರೇತರ ಸಂಘ ಸಂಸ್ಥೆಗಳು ಕೈ ಜೋಡಿಸಿವೆ. ಮಾಧ್ಯಮವರು ಕೊರೊನಾ ವಿರುದ್ಧದ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿ ಜನರಲ್ಲಿ ತಿಳಿವಳಿಕೆ ಮೂಡಿಸುತ್ತಿದ್ದಾರೆ. ಇವರೆಲ್ಲರಿಗೂ ಗೌರವ ಸಮರ್ಪಿಸುವ ನಿಟ್ಟಿನಲ್ಲಿ ಕಲಾವಿದ ಮಂಜುನಾಥ ಹಿರೇಮಠ ಮರಳು ಶಿಲ್ಪ ರಚನೆ ಮಾಡಿದ್ದಾರೆ. ಕಲಾಕೃತಿ ಸುಂದರವಾಗಿ ಮೂಡಿ ಬಂದಿದೆ ಎಂದು ಶ್ಲಾಘಿಸಿದರು.







