ಬೆಳಗಾವಿ: ಸಾರಿಗೆ ಬಸ್ ವೊಂದು ಆಕಸ್ಮಿಕ ಬೆಂಕಿಗೆ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ನರಸಿಂಗಪೂರ ಹತ್ತಿರದ ರಾಷ್ಟ್ರೀಯ ಹೆದ್ದಾರಿ 4ರ ಪಕ್ಕದ ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಬಸ್ಗೆ ಬೆಂಕಿ ತಗಲುತ್ತಿದ್ದಂತೆಯೇ ಎಚ್ಚೆತ್ತ ಚಾಲಕ ಪ್ರಯಾಣಿಕರನ್ನು ಕೆಳಗೆ ಇಳಿಯುವಂತೆ ಹೇಳಿದ್ದಾನೆ. ಈ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಈ ಬಸ್ ನಲ್ಲಿ 20ಕ್ಕೂ ಅಧಿಕ ಪ್ರಯಾಣಿಕರು ಇದ್ದರು ಎನ್ನಲಾಗಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಅಪಾಯ ಆಗಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿಯನ್ನು ನಂದಿಸಿದ್ದಾರೆ. ಸ್ಥಳಕ್ಕೆ ಸಾರಿಗೆ ಸಿಬ್ಬಂದಿ ಆಗಮಿಸಿ, ಬಸ್ ಗೆ ಬೆಂಕಿ ತಗುಲಿರುವ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಯಮಕನಮರಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.