ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ತಯಾರಿ ಈಗಿನಿಂದಲೇ ಶುರುವಾಗಿದೆ. ಕಾಂಗ್ರೆಸ್ ಪಕ್ಷ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸುವ ಸಾಧ್ಯತೆಯಿದೆ. ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಆಪರೇಷನ್ ಹಸ್ತಕ್ಕೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ ಎನ್ನಲಾಗಿದೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸದಸ್ಯ ಹಾಗೂ ರಾಜ್ಯಸಭಾ ಸಂಸದ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತ ಸಯ್ಯದ್ ನಸೀರ್ ಹುಸೇನ್ ಸಮ್ಮುಖದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರಿದ್ದಾರೆ.
ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಭಾನುವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು, ಅದಾದ ನಂತರ ಸೋಮವಾರ ಸೋಮಶೇಖರ್ ಬೆಂಬಲಿಗರು ಕಾಂಗ್ರೆಸ್ ಸೇರಿದ್ದಾರೆ. ಇದರಿಂದಾಗಿ ರಾಜಕೀಯದಲ್ಲಿ ದೊಡ್ಡ ಅಲೆಯೇ ಬೀಸಿದಂತಾಗಿದೆ.
ಕೆಆರ್ ಪುರಂ ಶಾಸಕ ಬೈರತಿ ಬಸವರಾಜ್ ಬೆಂಬಲಿಗರು ಮತ್ತು ಮಾಜಿ ಕಾರ್ಪೊರೇಟರ್‌ಗಳು ಕಾಂಗ್ರೆಸ್ ಸೇರಿದ್ದಾರೆ. ಶಾಸಕ ಮುನಿರತ್ನ ಅವರ ಬೆಂಬಲಿಗರು ಸೇರಿದಂತೆ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಕೆಲವು ಬಿಜೆಪಿ ಕಾರ್ಯಕರ್ತರು ಕೂಡ ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಬೆಂಗಳೂರು ಅಭಿವೃದ್ಧಿ ಸಚಿವರು ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಅಧಿಕಾರ ಚಲಾಯಿಸುತ್ತಿದ್ದು, ತಮ್ಮ ವಿರೋಧಿಗಳನ್ನು ತಣ್ಣಗಾಗಿಸಲು ಎಲ್ಲಾ ರೀತಿಯ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಅಭಿಪ್ರಾಯ ಪಟ್ಟಿದ್ದಾರೆ.