ರಾಮನಗರ: ಮುಡಾ ಹಗರಣದಲ್ಲಿ ಸಿಲುಕಿರುವ ಕಾಂಗ್ರೆಸ್, ಅದರಿಂದ ತಪ್ಪಿಸಿಕೊಳ್ಳಲು ಹಾಗೂ ಜನರ ಚಿತ್ತವನ್ನು ಬೇರೆ ಕಡೆ ತಿರುಗಿಸಲು ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರುತ್ತಿದೆ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ (Prosecution) ಅನುಮತಿ ಕೋರಿರುವ ಕಾಂಗ್ರೆಸ್, ಮುಡಾ (MUDA) ಹಗರಣ ಮುಚ್ಚಿ ಹಾಕುವ ತಂತ್ರ ಮಾಡುತ್ತಿದೆ. ಹೀಗಾಗಿಯೇ ಕಾಂಗ್ರೆಸ್ ನಿಂದ ರಾಜಭವನ ಚಲೋ ನಡೆಯುತ್ತಿದೆ. ಈ ಹೋರಾಟದಲ್ಲಿ ಯಾವ ಸತ್ಯ ಹಾಗೂ ಸತ್ವ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಉಪಚುನಾವಣೆ ಎದುರಾಗಿರುವ ಹಿನ್ನೆಲೆಯಲ್ಲಿ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ. ಕ್ಷೇತ್ರವನ್ನು ಜೆಡಿಎಸ್ ಗೆ ಉಳಿಸಿಕೊಳ್ಳುವಂತೆ ಒತ್ತಡ ಇದೆ. ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಕಣಕ್ಕಿಳಿಯುತ್ತಾರೆ. ಹೀಗಾಗಿ ಕ್ಷೇತ್ರದಲ್ಲಿ ಎನ್ ಡಿಎ ಅಭ್ಯರ್ಥಿ ಗೆಲ್ಲಬೇಕು. ಅದಕ್ಕಾಗಿ ಪಕ್ಷದ ಕಾರ್ಯಕರ್ತರು ಸಜ್ಜಾಗಬೇಕು.
ಸಿಪಿವೈ ಪರ ಬಿಜೆಪಿ (BJP) ನಾಯಕರು ಕಣಕ್ಕಿಳಿಯಲಿದ್ದಾರೆ. ಬಿಜೆಪಿಯ ಕೆಲ ರಾಜ್ಯನಾಯಕರು ಅವರವರ ಅಭಿಪ್ರಾಯ ಹೇಳಿದ್ದಾರೆ. ನಾವು ಯಾವುದನ್ನೂ ವಿರೋಧ ಮಾಡಲ್ಲ. ಅಂತಿಮವಾಗಿ ಬಿಜೆಪಿ ವರಿಷ್ಠರು ಹಾಗೂ ಕುಮಾರಸ್ವಾಮಿ ಅವರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದ್ದಾರೆ.
ಡಿಕೆಶಿಯವರು ಉದ್ಯೋಗ ಮೇಳ ನಡೆಸಿ ಜನರನ್ನು ಸೆಳೆಯಲು ಯತ್ನಿಸುತ್ತಿದ್ದಾರೆ. ಪ್ರೋಟೊಕಾಲ್ ಪ್ರಕಾರ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ಮಾಡಬೇಕು. ಆದರೆ ಉಪಚುನಾವಣೆ ಗಮನದಲ್ಲಿಟ್ಟುಕೊಂಡು ಚನ್ನಪಟ್ಟಣದಲ್ಲಿ ಧ್ವಜಾರೋಹಣ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.