ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಟಕ್ಕರ್ ನೀಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ಲಾನ್ ಮಾಡಿಕೊಂಡಿದ್ದು, ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೂ ಮನ್ನವೇ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಮುಂದಾಗಿದ್ದಾರೆ.
ಮುಖ್ಯಮಂತ್ರಿಗಳು ಮಂಗಳವಾರದಿಂದ ವೈಮಾನಿಕ ಸಮೀಕ್ಷೆ ನಡೆಸಲಿದ್ದು, ಕಾಂಗ್ರೆಸ್ ಕಟ್ಟಪ್ಪ ಡಿ.ಕೆ ಶಿವಕುಮಾರ್ ನಾಳೆಯಿಂದಲೇ ನೆರೆ ಪೀಡಿತ ಪ್ರದೇಶಗಳ ವೀಕ್ಷಣೆ ಮಾಡಲಿದ್ದಾರೆ.
ಆಗಸ್ಟ್ 24ರಂದು ಬೆಳಗ್ಗೆ 9ಕ್ಕೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಡಿಕೆಶಿ ಬೆಳಗ್ಗೆ 11.30ಕ್ಕೆ ಗೋಕಾಕ್ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಮಧ್ಯಾಹ್ನ 1 ಗಂಟೆಗೆ ಅರಭಾಂವಿ ಮತಕ್ಷೇತ್ರದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ಕೊಡಲಿದ್ದಾರೆ. ನಂತರ ಸಂಜೆ 4 ಗಂಟೆಗೆ ಘಟಪ್ರಭಾದಲ್ಲಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆ ನಡೆಸಲಿದ್ದಾರೆ.
ಸಂಜೆ 7.30ಕ್ಕೆ ಬೆಳಗಾವಿಗೆ ಆಗಮಿಸುವ ಡಿಕೆಶಿ ಸಕ್ರ್ಯೂಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಆಗಸ್ಟ್ 25ಕ್ಕೆ ಬೆಳಗಾವಿಯಿಂದ ಬಾಗಲಕೋಟೆಗೆ ಪ್ರವಾಸ ಬೆಳೆಸಲಿದ್ದಾರೆ. ಮಂಗಳವಾರ ಜಮಖಂಡಿ, ಮುಧೋಳ, ಬಾದಾಮಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿರುವ ಡಿಕೆಶಿ, ರಾತ್ರಿ ಹುಬ್ಬಳ್ಳಿಯಲ್ಲೇ ಇರಲಿದ್ದಾರೆ. ಈ ವೇಳೆ ಸ್ಥಳೀಯ ಕಾಂಗ್ರೆಸ್ ನಾಯಕರ ಜೊತೆ ಬಂಡೆ ಸಭೆ ನಡೆಸಲಿದ್ದು, ಬುಧವಾರ ಹುಬ್ಬಳ್ಳಿಯಿಂದ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.