ಬೆಂಗಳೂರಲ್ಲಿ ಪುಂಡರ ಪುಂಡಾಟ.. ಇದು ಪೂರ್ವನಿಯೋಜಿತ ಕೃತ್ಯ.. ಪರಿಸ್ಥಿತಿ ಕೈಮೀರಿದಾಗ ಪೊಲೀಸರಿಂದ ಗೋಲಿಬಾರ್ – ಗೃಹ ಸಚಿವ ಬಸವರಾಜ್ ಬೊಮ್ಮಾಯಿ
ಬೆಂಗಳೂರಲ್ಲಿ ಪುಂಡರ ಪುಂಡಾಟ – ಡಿಜೆ ಹಳ್ಳಿ ಮತ್ತು ಕೆ.ಜಿ. ಹಳ್ಳಿಯಲ್ಲಿ ನಡೆದಿರುವ ಗಲಭೆಯ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ನೆರೆ ಪ್ರವಾವ ವೀಕ್ಷಣೆಗೆ ನಿನ್ನೆ ಗೃಹ ಸಚಿವರು ಉಡುಪಿ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇಂದು ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಲಿದ್ದಾರೆ. ಬೆಂಗಳೂರಿಗೆ ಬಂದ ನಂತರ ಗಲಭೆ ವಿಚಾರವಾಗಿ ಸಿಎಂ ಬಿಎಸ್ವೈ ಜೊತೆ ಚರ್ಚೆ ನಡೆಸಲಿದ್ದಾರೆ.
ಕಿಡಿಗೇಡಿಗಳು ಪುಂಡಾಟ ನಡೆಸುವ ಮೂಲಕ ಸಮಾಜ ಹದಗೆಡಿಸಲು ಹಲವು ಪ್ರಯತ್ನ ಮಾಡಿದ್ದಾರೆ. ಅದು ನಿಯಂತ್ರಣ ತಪ್ಪಿದಾಗ ಕಠಿಣ ಕ್ರಮ ಕೈಗೊಳ್ಳಲೇಬೇಕಾಗುತ್ತೆ. ದುಷ್ಕರ್ಮಿಗಳು ಮನಸೋ ಇಚ್ಛೆ ವರ್ತಿಸಿದಾಗ ಕೊನೆಯ ಅಸ್ತ್ರವಾಗಿ ಗೋಲಿಬಾರ್ ಮಾಡಲಾಗಿದೆ. ಪೊಲೀಸರ ಗೋಲಿಬಾರ್ಗೆ ಮೂರು ಮಂದಿ ಅಸು ನೀಗಿದ್ದಾರೆ. ಈ ಘಟನೆಯಲ್ಲಿ ಪೊಲೀಸರಿಗೂ ಗಾಯಗಳಾಗಿವೆ. ಕಲ್ಲು ತೂರಾಟದ ವೇಳೆ ಓರ್ವ ಪೊಲೀಸ್ಗೆ ಗಂಭೀರ ಗಾಯಗಳಾಗಿವೆ ಎಂದು ಗೃಹ ಸಚಿವರು
ಗಲಭೆಯ ಬಗ್ಗೆ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ.
ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ ನೀಡಲಾಗುವುದು. ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ. 110 ಜನರನ್ನು ಬಂಧಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಕೇಂದ್ರ ಗೃಹ ಕಾರ್ಯದರ್ಶಿ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಇದು ಪೂರ್ವನಿಯೋಜಿತ ಕೃತ್ಯವಾಗಿದೆ. ಫೇಸ್ ಬುಕ್ ನಲ್ಲಿ ಚರ್ಚಿಸಿ ಈ ಕೃತ್ಯ ಮಾಡಿದ್ದಾರೆ. ಗಲಭೆ ಪೀಡಿತ ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾಗಳ ಮೂಲಕ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲಾಗುವುದು. ಗಲಭೆಯ ಹಿಂದೆ ಯಾರಿದ್ದಾರೆ ಎಂಬುದು ತನಿಖೆಯಿಂದ ತಿಳಿದುಬರಲಿದೆ. ಸಿಎಂ ಜೊತೆಗೆ ಚರ್ಚೆ ಮಾಡಿದ್ದೇನೆ. ಮಧ್ಯಾಹ್ನ ಬೆಂಗಳೂರಿಗೆ ಬಂದ ನಂತರ ಅಧಿಕಾರಿಗಳೊಂದಿಗೆ ಮತ್ತು ಸಿಎಂ ಜೊತೆ ಮತ್ತೊಂದು ಸುತ್ತಿನ ಚರ್ಚೆ ನಡೆಸಲಿದ್ದೇವೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. É








