ಬೆಂಗಳೂರು: ಕನಕಪುರ (Kanakpura) ತಾಲೂಕನ್ನು ಬೆಂಗಳೂರು ಜಿಲ್ಲೆಗೆ (Bangalore District) ಸೇರಿಸುತ್ತೇನೆ ಎಂದು ಹೇಳಿಕೆ ಕೊಟ್ಟಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮದ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಅವರು, ಕನಕಪುರ ಸುತ್ತಮುತ್ತ ಇರುವ ತಮ್ಮ ಆಸ್ತಿಗಳ ಮೌಲ್ಯ ಹೆಚ್ಚಿಸಿಕೊಂಡು ಖಜಾನೆ ವೃದ್ಧಿ ಮಾಡಿಕೊಳ್ಳುವ ಏಕೈಕ ದುರುದ್ದೇಶದಿಂದ ಡಿ.ಕೆ. ಶಿವಕುಮಾರ್ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಕುಮಾರ್ ಅವರು ರಾಮನಗರ ಜಿಲ್ಲೆಯಿಂದ ಕನಕಪುರ ತಾಲೂಕನ್ನು ಬೇರ್ಪಡಿಸಿ ಬೆಂಗಳೂರಿಗೆ ಸೇರಿಸುವೆ ಎಂದು ನೀಡಿರುವ ಹೇಳಿಕೆ ಸರಿಯಲ್ಲ. ಕನಕಪುರ ಸುತ್ತಮುತ್ತ ಇರುವ ತಮ್ಮ ಆಸ್ತಿಗಳ ಮೌಲ್ಯ ಹೆಚ್ಚಿಸಿಕೊಂಡು ತಮ್ಮ ಖಜಾನೆ ವೃದ್ಧಿ ಮಾಡಿಕೊಳ್ಳುವ ಏಕೈಕ ದುರುದ್ದೇಶ ಹೊಂದಿದ್ದಾರೆ. ಹೀಗಾಗಿ ಕನಕಪುರ ಜನರ ನೆಪ ಹೇಳಿಕೊಂಡು ಈ ಹೊಸ ನಾಟಕ ಶುರು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಕನಕಪುರದವರು ರಾಮನಗರ ಜಿಲ್ಲೆಯವರಲ್ಲ, ಬೆಂಗಳೂರು ಜಿಲ್ಲೆಯವರು ಎಂಬುದನ್ನು ನೆನಪಿಟ್ಟುಕೊಳ್ಳಿ ಎನ್ನುವ ಅವರ ಮಾತು ರಾಮನಗರ ಜಿಲ್ಲೆಗೆ ಎಸಗುವ ಮಹಾದ್ರೋಹ ಎಂದು ಗುಡುಗಿದ್ದಾರೆ.