ಬೆಂಗಳೂರು : “ವರ್ಕ್ ಫ್ರಮ್ ಎನಿವೇರ್’ ಎಂಬ ಪರಿಕಲ್ಪನೆ ಜನಪ್ರಿಯವಾಗುತ್ತಿರುವುದರಿಂದ ರಾಜ್ಯದ ದೂರಸಂಪರ್ಕ ವ್ಯವಸ್ಥೆ ಸುಧಾರಣೆ ಸಂಬಂಧ ಭಾಗೀದಾರರೊಂದಿಗೆ ಶೀಘ್ರ ಸಭೆ ಕರೆದು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅಧಿಕಾರಿಗಳಿಗೆ ಭರವಸೆ ನೀಡಿದರು.
ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಸರ್ಕಾರಿ ಹಾಗೂ ಖಾಸಗಿ ವಲಯದ ದೂರಸಂಪರ್ಕ ಜಾಲ ಸುಧಾರಣೆಯಿಂದ ಸರ್ಕಾರಿ ಕಚೇರಿ ಹಾಗೂ ಇತರೆಡೆಗಳಲ್ಲಿ ಕಾರ್ಯನಿರ್ವಹಣೆಯ ವೇಗ ಹೆಚ್ಚಲಿದೆ. ಕೋವಿಡ್19 ರ ಸಮಯ ಉಪ ಮುಖ್ಯಮಂತ್ರಿಗಳು ಹಾಗೂ ಇಲಾಖೆಯ ಅಧಿಕಾರಿಗಳು ಉದ್ಯಮದವರ ಸಂಪರ್ಕದಲ್ಲಿದ್ದು, ನೈತಿಕ ಬೆಂಬಲ ಸೂಚಿಸಿದ್ದಾರೆ. ಹಲವು ಸ್ಟಾರ್ಟಪ್‌ಗಳು ಕೋವಿಡ್ ಲಾಕ್‌ಡೌನ್ ಸಂದರ್ಭಗಳಲ್ಲಿ ಜನರಿಗೆ ನೆರವಾಗಲು ಹಾಗೂ ಕೋವಿಡ್ ನಿರ್ವಹಣೆಗೆ ಮಹತ್ತರ ಕೊಡುಗೆ ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ವೈದ್ಯಕೀಯ ಉಪಕರಣ ಹಾಗೂ ತಂತ್ರಜ್ಞಾನ ವಲಯ ಸ್ಥಾಪಿಸುವ ವಿಷಯ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಸಭೆಯಲ್ಲಿ ಸಿ ಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥನಾರಾಯಣ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ ವಿ ರಮಣರೆಡ್ಡಿ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.








