ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿ (Kallakurichi) ಜಿಲ್ಲೆಯಲ್ಲಿ ಕಳ್ಳಭಟ್ಟಿ ಸಾರಾಯಿ (Toxic Liquor) ಕುಡಿದು ಸಾವನ್ನಪ್ಪಿದವರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.
ಅಲ್ಲದೇ, 65ಕ್ಕೂ ಅಧಿಕ ಜನರು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದೆ. 18 ಜನರು ಪುದುಚೆರಿಯ ಜಿಪ್ಮರ್, 6 ಜನರು ಸೇಲಂನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳ್ಳಬಟ್ಟಿಯಲ್ಲಿ ವಿಷಕಾರಿ ಮೆಥನಾಲ್ ಇರುವಿಕೆಯು ವಿಧಿವಿಜ್ಞಾನ ಪ್ರಯೋಗಾಲಯದ ಪರೀಕ್ಷೆಯಲ್ಲಿ (FSL Test) ಖಚಿತವಾಗಿದೆ. ಹೀಗಾಗಿ ತಮಿಳುನಾಡು ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ.
ಇದು ರಾಜ್ಯ ಸರ್ಕಾರದ ನಿರ್ಲಕ್ಷ್ಯದ ಪರಿಣಾಮವಾಗಿ ಆಗಿರುವ ದುರಂತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ (AnnaMalai) ಆಕ್ರೋಶ ಹೊರಹಾಕಿದ್ದಾರೆ. ಎಐಎಡಿಎಂಕೆ ಮುಖ್ಯಸ್ಥರಾಗಿರುವ ತಮಿಳುನಾಡು ವಿಧಾನಸಭೆಯ ಪ್ರತಿಪಕ್ಷದ ನಾಯಕ ಪಳನಿಸ್ವಾಮಿ ಅವರು ಆಡಳಿತಾರೂಢ ಡಿಎಂಕೆ ಪಕ್ಷವನ್ನು ತರಾಟಗೆ ತೆಗೆದುಕೊಂಡಿದ್ದಾರೆ.
ಮೃತಪಟ್ಟವರ ಕುಟುಂಬಕ್ಕೆ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ (MK Stalin) 10 ಲಕ್ಷ ರೂ. ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಕುಟುಂಬಕ್ಕೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಈ ಕುರಿತು ತನಿಖೆಗೆ ಆದೇಶಿಸಿದ್ದಾರೆ.