ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಭಾಷಣಗಳು ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣವನ್ನು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಲೇವಡಿ ಮಾಡಿದ್ದಾರೆ.
ಮೋದಿ ಭಾಷಣದ ಬಗ್ಗೆ ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ, ಮೊದಲ ಟ್ವೀಟ್ ನಲ್ಲಿ.. ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತಾಗಿದೆ ಪ್ರಧಾನಿ ಭಾಷಣಗಳು. ನಿಯಂತ್ರಣ ಮೀರಿ ಹರಡುತ್ತಿರುವ ಕೊರೊನಾ ಸೋಂಕಿನಿಂದ ತತ್ತರಕ್ಕೀಡಾಗಿರುವ ಜನರಲ್ಲಿ ಆತ್ಮವಿಶ್ವಾಸ ತುಂಬುವ ಯಾವ ನಿರ್ದಿಷ್ಟ ಯೋಜನೆಗಳ ಪ್ರಸ್ತಾವಗಳೇ ಇಲ್ಲದ ಪ್ರಧಾನಿ ಭಾಷಣ, ಕೈಲಾಗದ ನಾಯಕನ ಗೋಳಾಟದಂತಿತ್ತು ಎಂದು ವ್ಯಂಗ್ಯವಾಡಿದ್ದಾರೆ.
ಬಡವರಿಗೆ ಉಚಿತ ಆಹಾರ ಧಾನ್ಯ ನೀಡುವ ಗರೀಬ್ ಕಲ್ಯಾಣ ಯೋಜನೆ ನವೆಂಬರ್ ವರೆಗೆ ಮುಂದುವರಿಸಿರುವುದು ಸ್ವಾಗತಾರ್ಹ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿಯವರು ತಿಂಗಳ ಹಿಂದೆಯೇ ಈ ಬೇಡಿಕೆ ಇಟ್ಟಿದ್ದರು. ಅದನ್ನು ಒಪ್ಪಿಕೊಂಡದ್ದಕ್ಕೆ ಧನ್ಯವಾದಗಳು ಎಂದು ತಮ್ಮ ಎರಡನೇ ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ ಸಿದ್ದರಾಮಯ್ಯ.
ಕೊರೊನಾ ಸೋಂಕಿನ ತೀವ್ರತೆ ನೋಡಿದರೆ ಇದು 2-3 ತಿಂಗಳೊಳಗೆ ಕೊನೆಗೊಳ್ಳುವಂತಹದ್ದಲ್ಲ. ದೇಶದಲ್ಲಿ ಹಸಿವಿನ ಸಮಸ್ಯೆ ಇನ್ನಷ್ಟು ಭೀಕರವಾಗಲಿದೆ. ಆದ್ದರಿಂದ ನಾವು ಜಾರಿಗೊಳಿಸಿದ್ದ ಅನ್ನಭಾಗ್ಯ ಯೋಜನೆಯನ್ನು ಇಡೀ ದೇಶದಲ್ಲಿ ಜಾರಿಗೆ ತರಬೇಕೆಂದು ಪ್ರಧಾನಿ ಅವರನ್ನು ಒತ್ತಾಯಿಸುತ್ತೇನೆ. ಆಸ್ಪತ್ರೆಗಳು ತುಂಬಿ ಹೋಗಿವೆ. ಆಮ್ಲಜನಕ ಪೂರೈಕೆ ವ್ಯವಸ್ಥೆ, ವೆಂಟಿಲೇಟರ್ಗಳ ತೀವ್ರ ಕೊರತೆ ಇದೆ. ದುಬಾರಿ ಚಿಕಿತ್ಸೆ ವೆಚ್ಚದಿಂದಾಗಿ ಕೊರೊನಾ ಸೋಂಕಿಗಿಂತ, ಚಿಕಿತ್ಸೆಗೆ ಜನ ಹೆದರುವಂತಾಗಿದೆ. ಈ ಬಗ್ಗೆ ರಾಜ್ಯಗಳಿಗೆ ಕೇಂದ್ರ ನೆರವು ಘೋಷಿಸಬಹುದೆಂಬ ನಿರೀಕ್ಷೆ ಹುಸಿಯಾಗಿದೆ ಎಂದು ಬೇಸರ ಹೊರಹಾಕಿದ್ದಾರೆ.
ಪಿಎಂ ಕೇರ್ಸ್ ನಿಧಿಗೆ ನೆರವಾಗಲು ದೇಶದ ಜನರನ್ನು ವಿನಂತಿಸಿದ್ದ ಪ್ರಧಾನಿ ಮೋದಿ ಅದರ ಖರ್ಚು-ವೆಚ್ಚದ ವಿವರವನ್ನು ದೇಶದ ಮುಂದಿಟ್ಟು ಪಾರದರ್ಶಕವಾಗಿ ನಡೆದುಕೊಳ್ಳಬಹುದೆಂಬ ನಿರೀಕ್ಷೆಯೂ ಹುಸಿಯಾಗಿದೆ. ಇದಕ್ಕೆ ಚೀನಾದಿಂದಲೂ ದೇಣಿಗೆ ಪಡೆಯಲಾಗಿದೆ ಎಂಬ ಆರೋಪಗಳಿವೆ. ಈ ಬಗ್ಗೆ ಸ್ಪಷ್ಟೀಕರಣ ನೀಡಬೇಕಿತ್ತು ಎಂದು ಒತ್ತಾಯಿಸಿರುವ ಸಿದ್ದರಾಮಯ್ಯ, ಸತತ 23ನೇ ದಿನ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಾಗಿದ್ದು, ಆಹಾರ ಧಾನ್ಯ, ತರಕಾರಿ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆಯೂ ಏರುತ್ತಿದೆ. ಈ ತೈಲ ಬೆಲೆ ಇನ್ನೆಷ್ಟು ದಿನಗಳ ಕಾಲ ಏರಲಿದೆ ಎಂದಾದರೂ ನರೇಂದ್ರ ಮೋದಿ ಹೇಳಿಬಿಟ್ಟಿದ್ದರೆ ಜನ ಕೆಟ್ಟ ದಿನಗಳಿಗೆ ಹೊಂದಿಕೊಳ್ಳಲು ಸಿದ್ಧವಾಗುತ್ತಿದ್ದರು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೊನೆಯ ಟ್ವೀಟ್ ನಲ್ಲಿ, ಹುತಾತ್ಮ 20 ವೀರಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಘೋಷಿಸಿದ್ದ ಪ್ರಧಾನಿ ನರೇಂದ್ರ ಮೋದಿ ಇದಕ್ಕಾಗಿ ಏನು ಮಾಡಿದ್ದಾರೆ ಎನ್ನುವುದನ್ನು ತಿಳಿಸಿದ್ದರೆ ನೊಂದ ದೇಶದ ಜನತೆ ಮತ್ತು ದುಃಖತಪ್ತ ವೀರಯೋಧರ ಕುಟುಂಬಕ್ಕೆ ಸಾಂತ್ವನ ಮಾಡಿದ ಹಾಗಾಗುತ್ತಿತ್ತು ಎಂದಿದ್ದಾರೆ.