ಬೆಂಗಳೂರು: ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಹಾಗೂ ನಾಳೆ ಮಳೆಯ ಅಬ್ಬರ ಹೆಚ್ಚಾಗಲಿದ್ದು, ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ಹಲವೆಡೆ ನಾಲ್ಕು ದಿನಗಳ ಕಾಲ ಭರ್ಜರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ನಗರದಲ್ಲಿ ಇಂದು ಮತ್ತು ನಾಳೆ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆಯ ನಂತರ ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.