ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ (SSLC Preparatory Exam 2024 Date Sheet) ವೆಚ್ಚವನ್ನು ವಿದ್ಯಾರ್ಥಿಗಳಿಂದಲೇ ಸಂಗ್ರಹಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿ, ಮಕ್ಕಳ ದುಡ್ಡನ್ನು ಕೂಡ ಕಾಂಗ್ರೆಸ್ ಬಿಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಆಕ್ರೋಶ ಹೊರ ಹಾಕಿರುವ ಕುಮಾರಸ್ವಾಮಿ, ಮಕ್ಕಳ ಕಿಸೆಗೂ ಕೈ ಹಾಕಿದೆ. ಇದು ಗತಿಗೆಟ್ಟ ಸರ್ಕಾರ ಎಂದು ವಾಗ್ದಾಳಿ ನಡೆಸಿರುವ ಅವರು, ಪೂರ್ವ ಸಿದ್ಧತಾ ಪರೀಕ್ಷೆ ಕುರಿತು ಸರ್ಕಾರ ಹೊರಡಿಸಿದ್ದ ಸುತ್ತೋಲೆ ಲಗತ್ತಿಸಿದ್ದಾರೆ.
ಜನತೆಗೆ 5 ಗ್ಯಾರಂಟಿ ಕೊಟ್ಟೆವು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಅದೆಷ್ಟು ಅಧಃಪತನಕ್ಕೆ ಹೋಗಿದೆ ಎನ್ನುವುದಕ್ಕೆ ಸಾಕ್ಷ್ಯ ಇಲ್ಲಿದೆ. ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ಸರಕಾರ, ಎಸ್ಸೆಸ್ಸೆಲ್ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ. ಅಕ್ರಮ ಸುಲಿಗೆಯಲ್ಲಿ ‘ಸಿದ್ದಹಸ್ತ’ವಾಗಿರುವ ಸರಕಾರ, ಈಗ ಕಾನೂನು ಬದ್ಧವಾಗಿಯೇ ಸುಲಿಗೆ ಮಾಡುತ್ತಿದೆ, ಅದೂ ಲಜ್ಜೆಗೆಟ್ಟು. ಇದೇ ಫೆಬ್ರವರಿ 26ರಿಂದ ಮಾರ್ಚ್ 3ರವರೆಗೂ ನಡೆಯಲಿರುವ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ಆಗುವ ವೆಚ್ಚವನ್ನು ನಾಚಿಕೆಗೆಟ್ಟ ಸರ್ಕಾರವು ಮಕ್ಕಳಿಂದಲೇ ವಸೂಲಿ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಪ್ರಶ್ನೆಪತ್ರಿಕೆ ತಯಾರಿ, ಮುದ್ರಣ, ಸಾಗಣೆ ವೆಚ್ಚವನ್ನು ವಿದ್ಯಾರ್ಥಿಗಳ ಮೇಲೆಯೇ ಹೇರಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಆದೇಶಿಸಿದ್ದಾರೆ. ವೆಚ್ಚ ವಸೂಲಿ ಮಾಡುವಂತೆ ಎಲ್ಲಾ ಸರಕಾರಿ ಶಾಲೆಗಳ ಮುಖ್ಯ ಶಿಕ್ಷಕರಿಗೆ ಆದೇಶಿಸಿರುವುದು ಸರಕಾರ ಎಷ್ಟರ ಮಟ್ಟಿಗೆ ದಿವಾಳಿಯೆದ್ದು ಹೋಗಿದೆ ಎನ್ನುವುದಕ್ಕೆ ಸಾಕ್ಷಿ ಎಂದು ಟೀಕಿಸಿದ್ದಾರೆ.