ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳು ನಿರಂತರ ಮಳೆಯಿಂದಾಗಿ (Rain) ಪರಿತಪಿಸುತ್ತಿವೆ. ಈ ಮಧ್ಯೆ ಮತ್ತೆ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮುಂದಿನ ಕೆಲವು ದಿನಗಳ ಕಾಲ ಕರಾವಳಿ ಜಿಲ್ಲೆಗಳಿಗೆ ಮಳೆಯಿಂದ ಬಿಡುವಿಲ್ಲ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ತಿಳಿಸಿದೆ. ಹೀಗಾಗಿ ಇಂದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ. ನಿನ್ನೆಯ ತನಕ ಕರಾವಳಿ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಇತ್ತು. ಆದರೆ, ಇಂದು ಉಡುಪಿ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ಮಲೆನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತವರಣ ಮುಂದುವರಿಯಲಿದ್ದು, ಕೆಲವೊಮ್ಮೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದಂತೆ ಬೆಳಗಾವಿ ಸೇರಿದಂತೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.








