ಬೆಂಗಳೂರು: ಚುನಾವಣೆ ನೀತಿ ಸಂಹಿತೆ (Model Code of Conduct) ಇರುವ ಹಿನ್ನೆಲೆಯಲ್ಲಿ ಪಂಚಮಸಾಲಿ ಮೀಸಲಾತಿ (Reservation) ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಪಂಚಮಸಾಲಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.
ಜಯ ಮೃತ್ಯುಂಜಯ ಸ್ವಾಮೀಜಿ (Jaya Mrityunjaya Swamiji) ನೇತೃತ್ವದ ನಿಯೋಗ ಇಂದು ಸಿಎಂ ಸಿದ್ದರಾಮಯ್ಯ ಜೊತೆ ಸಭೆ ನಡೆಸಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರವರ್ಗ-2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಸರ್ಕಾರ ಮೀಸಲಾತಿ ವಿಷಯದಲ್ಲಿ ಮುಕ್ತ ಮನಸ್ಸು ಹೊಂದಿದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ. ಎಲ್ಲಾ ದುರ್ಬಲ ವರ್ಗದವರಿಗೂ ನ್ಯಾಯ ದೊರೆಯಬೇಕು ಎಂಬುವುದು ನಮ್ಮ ನಿಲುವು. ಶಾಶ್ವತವಾದ ಹಿಂದುಳಿದ ವರ್ಗಗಳ ಆಯೋಗವಿದೆ. ಅದರ ಅಂತಿಮ ಶಿಫಾರಸ್ಸು ಇನ್ನೂ ನಮ್ಮ ಕೈಗೆ ತಲುಪಿಲ್ಲ. ಚುನಾವಣೆ ನೀತಿ ಸಂಹಿತೆ ಇರುವುದರಿಂದ ಮೀಸಲಾತಿ ಕುರಿತಾಗಿ ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ, ತಜ್ಞರೊಂದಿಗೆ, ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.