ಈ ಬಾರಿ ಲಾಕ್ ಡೌನ್ ಕಠಿಣ: ನಾಳೆ ಡಿಸಿಗಳ ಸಭೆ ನಂತರ ರಾಜ್ಯಾದ್ಯಂತ ಲಾಕ್ ಡೌನ್ ಪಕ್ಕಾನಾ ?
ಬೆಂಗಳೂರು: ಮಂಗಳವಾರ ರಾತ್ರಿಯಿಂದ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್ ಡೌನ್ ಗೆ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ನೀಡಿದ್ದಾರೆ.
ಲಾಕ್ ಡೌನ್ ಮಾರ್ಗಸೂಚಿ ರಚನೆ ಸಂಬಂಧಿಸಿದಂತೆ ನಾಳೆ ಸಿಎಂ ಯಡಿಯೂರಪ್ಪ ಸಚಿವರು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ.
ಸಭೆಯಲ್ಲಿ ಬೆಂಗಳೂರು ಮಾತ್ರವಲ್ಲ ರಾಜ್ಯಾದ್ಯಂತ ಲಾಕ್ ಡೌನ್ ಮಾಡುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.
ಊರಿಗೆ ಹೋಗುವವರು ನಾಳೆಯೆ ಹೊರಡಿ, ಕಂಪ್ಲೀಟ್ ಲಾಕ್ ಡೌನ್ ಪಕ್ಕಾ ಎಂದು ಸಚಿವ ಆರ್ ಅಶೋಕ್ ಸುಳಿವು ನೀಡಿದ್ದರೆ, ಈ ಬಾರಿಯ ಲಾಕ್ ಡೌನ್ ಕಠಿಣವಾಗಿರಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೂಡ ಹೇಳಿದ್ದಾರೆ. ಹೀಗಾಗಿ ರಾಜ್ಯಾದ್ಯಂತ ಲಾಕ್ ಡೌನ್ ಮಾಡಿದ್ರೂ ಅಚ್ಚರಿ ಇಲ್ಲ ಎನ್ನಲಾಗಿದೆ.

ಈ ಕಾರಣದಿಂದ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯ ಲಾಕ್ ಡೌನ್ ಮಾಡುವುದಾಗಿ ಹೇಳಿ ಊರಿಗೆ ಹೋಗುವವರಿಗೆ ಎರಡು ದಿನಗಳ ಕಾಲಾವಕಾಶ ನೀಡಲಾಗಿದೆ.
ಹೀಗಾಗಿ ನಾಳೆ ನಡೆಯುವ ಸಿಎಂ ಸಭೆ ಭಾರಿ ಮಹತ್ವ ಪಡೆದುಕೊಂಡಿದೆ.
ಇದೇ ವೇಳೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಜಿಲ್ಲೆಗಳಲ್ಲಿರುವ ಕೊರೊನಾ ಪರಿಸ್ಥಿತಿ ಬಗ್ಗೆ ಯಡಿಯೂರಪ್ಪ ಸಮಾಲೋಚನೆ ನಡೆಸಲಿದ್ದಾರೆ.
ಜಿಲ್ಲೆಗಳಲ್ಲೂ ಲಾಕ್ ಡೌನ್ ಮಾಡುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಲಾಕ್ ಡೌನ್ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಈ ಬಾರಿಯ ಲಾಕ್ ಡೌನ್ ಹಿಂದಿನದಕ್ಕಿಂತ ಕಠಿಣವಾಗಿರಲಿದೆ. ಜನರು ಬೇಕಾಬಿಟ್ಟಿ ಓಡಾಡಿದ್ರೆ ಕಠಿಣ ಕ್ರಮ ನಿಶ್ಚಿತ ಎಂದಿದ್ದಾರೆ.
ರಾಜ್ಯಾದ್ಯಂತ ಹಾಗೂ ಬೆಂಗಳೂರಿನಲ್ಲಿ ಲಾಕ್ ಡೌನ್ ಯಶಸ್ವಿಯಾಗಿ ಮಾಡಲು ಪೊಲೀಸ್ ಇಲಾಖೆ ಸನ್ನದ್ದವಾಗಿದೆ ಎಂದಿರುವುದು ಕೂಡ ಮತ್ತೊಮ್ಮೆ ರಾಜ್ಯಾದ್ಯಂತ ಲಾಕ್ ಡೌನ್ ಮಾಡಬಹುದು ಎಂಬುದಕ್ಕೆ ಪುಷ್ಟಿ ನೀಡಿದೆ.








