ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ (Bengaluru Mysuru Expressway) ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದು, ಓರ್ವ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಮಂಡ್ಯ (Mandya) ಜಿಲ್ಲೆಯ ಮದ್ದೂರು ತಾಲೂಕಿನ ಗಜ್ಜಲೆಗೆರೆ ಹತ್ತಿರವೇ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾರು ಹಾಗೂ ಟಾಟಾ ಹೆಕ್ಸಾ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ
ಸಾವನ್ನಪ್ಪಿದ ಓರ್ವ ವ್ಯಕ್ತಿಯನ್ನು ನೀರಜ್ ಕುಮಾರ್ ಎಂದು ಗುರುತಿಸಲಾಗಿದ್ದು, ಅವರು ಉತ್ತರ ಪ್ರದೇಶದ ತರಬೇತಿ ಹಾಗೂ ನೇಮಕಾತಿ ವಿಭಾಗದ ಹೆಚ್ಚುವರಿ ನಿರ್ದೇಶಕ ಎನ್ನಲಾಗಿದೆ. ಮಂಗಳವಾರ ಬೆಳಗ್ಗೆ ನೀರಜ್ ಕುಮಾರ್ ತಮ್ಮ ಪತ್ನಿ ಸೆಲ್ವಿ ಹಾಗೂ ಪುತ್ರ ಶ್ರೀವತ್ಸ ಅವರೊಂದಿಗೆ ಬೆಂಗಳೂರಿನಿಂದ ಮಡಿಕೇರಿಗೆ ಪ್ರವಾಸ ತೆರಳಿದ್ದರು.
ದುರ್ಘಟನೆಯಲ್ಲಿ ನೀರಜ್ ಕುಮಾರ್, ಪತ್ನಿ ಸೆಲ್ವಿ ಹಾಗೂ ಚಾಲಕ ನಿರಂಜನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪುತ್ರ ಶ್ರೀವತ್ಸಗೆ ಗಂಭೀರ ಗಾಯವಾಗಿದ್ದು, ಅವರನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮದ್ದೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








