ತುಮಕೂರು: ಒಂದೇ ಆಸ್ಪತ್ರೆಯಲ್ಲಿ ಒಂದೇ ದಿನ ಬೇರೆ ಬೇರೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳಾ ರೋಗಿಗಳು ಸಾವನ್ನಪ್ಪಿದ್ದು, ಆಕ್ರೋಶ ವ್ಯಕ್ತವಾಗಿದೆ.
ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಸಂತಾನಹರಣ, ಗರ್ಭಕೋಶ ಆಪರೇಷನ್ ಹಾಗೂ ಸಿಸೇರಿಯನ್ ಹೆರಿಗೆಗೆ ಒಳಗಾಗಿದ್ದ ಮೂವರು ಸಾವನ್ನಪ್ಪಿದ್ದು, ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಫೆಬ್ರವರಿ 22ರಂದು 7 ಮಹಿಳೆಯರಿಗೆ ಹೆರಿಗೆ ಸೇರಿದಂತೆ ವಿವಿಧ ರೀತಿಯ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಸಂತಾನ ಹರಣ ಚಿಕಿತ್ಸೆ ಮಾಡಿಸಿಕೊಂಡಿದ್ದ ವೀರ್ಲಗೊಂದಿ ಗ್ರಾಮದ ಮಹಿಳೆ ಅನಿತಾ (30) ಚಿಕಿತ್ಸೆ ಮಾಡಿಸಿಕೊಂಡ ದಿನ ಸಾವನ್ನಪ್ಪಿದ್ದರೆ, ರಾಜವಂತಿ ಮೂಲದ ಅಂಜಲಿ ಎಂಬ ಮಹಿಳೆ ಸಿಸೇರಿಯನ್ ಮಾಡಿಸಿಕೊಂಡ ನಂತರ ಗಂಭೀರವಾಗಿದ್ದರು. ಕೂಡಲೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಬ್ಯಾಡನೂರು ಗ್ರಾಮದ 40 ವರ್ಷದ ನರಸಮ್ಮ ಎಂಬ ಮಹಿಳೆ ಗರ್ಭಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇವರ ಸ್ಥಿತಿ ಕೂಡ ಗಂಭೀರವಾಗಿದ್ದರಿಂದಾಗಿ ಅವರನ್ನು ವಾಣಿವಿಲಾಸ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸಿಬ್ಬಂದಿಯ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕುಟುಂಬಸ್ಥರು ಹಾಗೂ ಸಾರ್ವಜನಿಕರು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.