ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಬಳ್ಳಾರಿ ಮೂಲದ ನಿರ್ಮಲಾ (50) ಮೃತಪಟ್ಟಿದ್ದಾರೆ. ಈ ದುರಂತದಲ್ಲಿ ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ, 41 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ತಿರುಪತಿಯಲ್ಲಿ ಬುಧವಾರ ರಾತ್ರಿ ತೀವ್ರ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (ಟಿಟಿಡಿ) ವೈಕುಂಠ ಏಕಾದಶಿ ಪ್ರಯುಕ್ತ ದರ್ಶನ ಟಿಕೆಟ್ಗಳನ್ನು ವಿತರಿಸಲು 94 ಕೌಂಟರ್ಗಳನ್ನು ಸ್ಥಾಪಿಸಿತ್ತು. ಟೋಕನ್ಗಳಿಗಾಗಿ ಭಕ್ತರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಈ ಸಂದರ್ಭದಲ್ಲಿ ಟಿಕೆಟ್ ಕೌಂಟರ್ ಸಿಬ್ಬಂದಿಯೊಬ್ಬರು ಅಸ್ವಸ್ಥಗೊಂಡ ಕಾರಣ ಗೇಟ್ ತೆರೆದಾಗ, ಜನರು ಗುಂಪಾಗಿ ಒಳಗೆ ನುಗ್ಗಲು ಯತ್ನಿಸಿದರು. ಈ ವೇಳೆ ಕಾಲ್ತುಳಿತ ಸಂಭವಿಸಿದೆ.
ಮೃತರಲ್ಲಿ ಬಳ್ಳಾರಿ ಮೂಲದ ನಿರ್ಮಲಾ (50) ಸೇರಿದಂತೆ, ವೈಜಾಗ್ನ ರಜನಿ (47), ಲಾವಣ್ಯ (40), ಶಾಂತಿ (30), ಸೇಲಂನ ಮಲ್ಲಿಕಾ (49) ಹಾಗೂ ನರಸಿಪಟ್ಟಣದ ನಾಯ್ಡು ಬಾಬು (59) ಸೇರಿದ್ದಾರೆ.
ಪ್ರಧಾನಿ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.
ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಗಾಯಾಳುಗಳನ್ನು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದ್ದಾರೆ.
ಈ ದುರಂತವು ತಿರುಪತಿ ತಿರುಮಲದಲ್ಲಿ ಭಕ್ತರ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಎಬ್ಬಿಸಿದೆ.