ಟಿಎಂಸಿ ನಾಯಕರೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನಲ್ಲಿ ಈ ಘಟನೆ ನಡೆದಿದ್ದು, ಟಿಎಂಸಿ ನಾಯಕ ಸತ್ಯನ್ ಚೌಧರಿ ಎಂಬುವವರನ್ನೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿ, ಪರಾರಿಯಾಗಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ಸತ್ಯನ್ ಅವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಚೌಧರಿ ಮುರ್ಷದಾಬಾದ್ನ ಕ್ಷೇತ್ರದಲ್ಲಿ ಪ್ರಭಾವಿ ನಾಯಕರಾಗಿದ್ದರು. ಅವರು ತಮ್ಮ ಮನೆಯ ಹತ್ತಿರದ ಅಂಗಡಿಯೊಂದರಲ್ಲಿ ಕುಳಿತಿದ್ದ ವೇಳೆ ಬೈಕ್ ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ತೃಣಮೂಲ ನಾಯಕ ಸ್ಥಳದಲ್ಲೇ ರಕ್ತಸಿಕ್ತ ಸ್ಥಿತಿಯಲ್ಲಿ ಬಿದ್ದಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.








