ನವದೆಹಲಿ : ಇಂದು ಎಐಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಅವರ ಜನ್ಮದಿನ. 50ನೇ ವರ್ಷಕ್ಕೆ ಕಾಲಿಡುತ್ತಿರುವ ಅವರು ಈ ವರ್ಷ ತಮ್ಮ ಹುಟ್ಟುಹಬ್ಬ ಆಚರಿಸದಿರಲು ನಿರ್ಧರಿಸಿದ್ದಾರೆ.
ಕೊರೊನಾ ವೈರಸ್ ಸೋಂಕಿನ ಸಂಕಷ್ಟ ಮತ್ತು ಭಾರತ-ಚೀನಾ ಗಡಿಯ ಲಡಾಕ್ ನಲ್ಲಿ ಕಳೆದ ಸೋಮವಾರ ರಾತ್ರಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾದ ಹಿನ್ನೆಲೆಯಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸದಿರಲು ನಿರ್ಧರಿಸಿದ್ದಾರೆ ಎಂದು ಕಾಂಗ್ರೆಸ್ ಅಧಿಕೃತವಾಗಿ ಪ್ರಕಟಿಸಿದೆ.
ಈ ಬಗ್ಗೆ ದೇಶದ ಎಲ್ಲ ರಾಜ್ಯಗಳ ಕಾಂಗ್ರೆಸ್ ಘಟಕಗಳಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಮಾಹಿತಿ ನೀಡಿದ್ದಾರೆ. ಜೊತೆಗೆ ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಮಾಡಿ, ಬಡವರಿಗೆ ಆಹಾರ ಕಿಟ್ ವಿತರಿಸಿ ಆದ್ರೆ ಯಾವುದೇ ಸಂಭ್ರಮಾಚರಣೆ ಮಾಡಬೇಡಿ ಎಂದು ಕರೆಕೊಟ್ಟಿದ್ದಾರೆ.
ಈ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕೂಡ ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರಿಗೆ ಸಂಭ್ರಮಾಚರಣೆ ಮಾಡದೇ ಬಡವರಿಗೆ ನೆರವಾಗಿ ಎಂದು ಮನವಿ ಮಾಡಿಕೊಂಡಿದ್ದಾರೆ.