ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕು ತಡೆಗೆ ಲಾಕ್‍ಡೌನ್ ಮಾಡಿದ್ದರಿಂದ ಮುಂದೂಡಲಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಾಳೆ ನಡೆಯಲಿದೆ.
ಕಳೆದ ಮಾರ್ಚ್ 23ರಂದು ಇಂಗ್ಲಿಷ್ ಪರೀಕ್ಷೆ ನಡೆಯಬೇಕಿತ್ತು. ದೇಶಾದ್ಯಂತ ಮಾರ್ಚ್ 25ರಿಂದ ಲಾಕ್‍ಡೌನ್ ಮಾಡಲಾಯಿತು. ಅದಕ್ಕೂ ಮೊದಲೇ ರಾಜ್ಯದಲ್ಲಿ ಲಾಕ್‍ಡೌನ್ ಮಾಡಿದ್ದರಿಂದ ಇಂಗ್ಲಿಷ್ ಪರೀಕ್ಷೆಯನ್ನು ಮುಂದೂಡಲಾಗಿತ್ತು.
ನಾಳೆ ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆಯಲಿದ್ದು, ಸುಮಾರು 8.5 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂಗ್ಲಿಷ್ ಪರೀಕ್ಷೆಯನ್ನು ರದ್ದು ಮಾಡುವಂತೆ ಸಾಮಾಜಿಕ ಜಾಲಗಳಲ್ಲಿ ಪೋಷಕರು ರಾಜ್ಯ ಸರ್ಕಾರದ ಮೇಲೆ ಭಾರಿ ಒತ್ತಡ ಹಾಕಿದ್ದರು. ಆದರೂ ರಾಜ್ಯ ಶಿಕ್ಷಣ ಇಲಾಖೆ ಪರೀಕ್ಷೆ ಮುಂದೂಡಲು ನಿರಾಕರಿಸಿತ್ತು.
ನಿಗದಿಯಂತೆ ನಾಳೆ ಇಂಗ್ಲಿಷ್ ವಿಷಯದ ಪರೀಕ್ಷೆ ನಡೆಯಲಿದ್ದು, ಸಾಮಾಜಿಕ ಅಂತರ, ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
“ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಆತಂಕ ಬೇಡ”
ನಾಳೆ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಿ ಬಿಬಿಎಂಪಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಮಂಜುಳಾ ನಾರಾಯಣಸ್ವಾಮಿ ಭೇಟಿ ಪರಿಶೀಲನೆ ನಡೆಸಿದರು.
ಶ್ರೀರಾಂಪುರ ಪರೀಕ್ಷಾ ಕೇಂದ್ರ ಸೇರಿದಂತೆ ಹಲವು ಕೇಂದ್ರಗಳಲ್ಲಿ ಸುರಕ್ಷತಾ ಕ್ರಮಗಳ ಪರಿಶೀಲನೆ ನಡೆಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಆತಂಕ ಬೇಡ. ಪರೀಕ್ಷಾ ಕೇಂದ್ರಗಳು ಸುರಕ್ಷಿತವಾಗಿದೆ. ಎಲ್ಲಾ ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸುತ್ತೇವೆ. ವಿದ್ಯಾರ್ಥಿಗಳ ಸುರಕ್ಷತೆಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೀಗಾಗಿ ವಿದ್ಯಾರ್ಥಿಗಳು, ಪೋಷಕರು ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದು ಮಂಜುಳಾ ನಾರಾಯಣಸ್ವಾಮಿ ಹೇಳಿದ್ದಾರೆ.