ಶಿವಮೊಗ್ಗ: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಸಾರಿಗೆ ಸಂಸ್ಥೆ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಬಸವರಾಜು ಟಿ.ವಿ ಆತ್ಮಹತ್ಯೆಗೆ ಯತ್ನಿಸಿದ ಚಾಲಕ-ಕಂ-ನಿರ್ವಾಹಕ. ಶಿವಮೊಗ್ಗ ವಿಭಾಗದ ಹೊನ್ನಾಳಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರ ಎಂದು ತಿಳಿದು ಬಂದಿದೆ.
ಇದೇ ಘಟಕದಲ್ಲಿ ಕೆ.ರೇಣುಕಾ ಎಂಬುವರು ಮೆಕ್ಯಾನಿಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇಬ್ಬರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿತ್ತು. ಹೀಗಾಗಿ ಹಿರಿಯ ಅಧಿಕಾರಿಗಳ ಬೆಂಬಲದೊಂದಿಗೆ ಕೆ. ರೇಣುಕಾ, ಬಸವರಾಜು ಟಿ.ವಿ ಮತ್ತು ಮತ್ತೋರ್ವ ಚಾಲಕ ಸಿ. ಮಹೇಶ್ವರ ವಿರುದ್ಧ ಹೊನ್ನಾಳಿ ಪೋಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ಹಾಗೂ ಜಾತಿ ನಿಂದನೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿತ್ತು. ಈ ಕುರಿತು ಮೇಲಧಿಕಾರಿಗಳ ಬಳಿ ಹೇಳಿಕೊಂಡಿದ್ದರೂ ಸ್ಪಂದಿಸಿರಲಿಲ್ಲ. ಹೀಗಾಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ತಮ್ಮ ಈ ಕೃತ್ಯಕ್ಕೆ ಬಸವರಾಜು ಟಿ.ವಿ ಡೆತ್ ನೋಟ್ ಬರೆದಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.