ರಾಮನಗರ: ರಾಜ್ಯದಲ್ಲಿ ಕೊರೊನಾ ಸೋಂಕು ಭೀತಿ ಹೆಚ್ಚುತ್ತಿರುವ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತಮ್ಮ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಅವರು ಸ್ವಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿದ್ದು, ನಾಳೆ ಕನಕಪುರದಲ್ಲಿ 2 ಕಾರ್ಯಕ್ರಮಗಳು ನಿಗದಿಯಾಗಿತ್ತು. ಆದ್ರೆ ಇದೀಗ ಈ ಕಾರ್ಯಕ್ರಮಗಳು ರದ್ದಾಗಿವೆ.

ಕೆಪಿಸಿಸಿ ಅಧ್ಯಕ್ಷರಾದ ಹಿನ್ನೆಲೆಯಲ್ಲಿ ಸ್ವಕ್ಷೇತ್ರಕ್ಕೆ ನಾನೇ ಬರುತ್ತೇನೆ. ಯಾರೊಬ್ಬರೂ ಬೆಂಗಳೂರಿಗೆ ಬರುವುದು ಬೇಡ ಎಂದು ಡಿ.ಕೆ. ಶಿವಕುಮಾರ್ ಕ್ಷೇತ್ರದ ಕಾರ್ಯಕರ್ತರು ಮತ್ತು ಮುಖಂಡರಿಗೆ ತಿಳಿಸಿದ್ದರು. ನಾಳೆ ಕನಕಾಂಬರಿ ಮಹಿಳಾ ಒಕ್ಕೂಟದ ಕಾರ್ಯಕ್ರಮದಲ್ಲಿ ಮತ್ತು ಜಾಗೃತಿ ಸಮಾವೇಶ, ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಡಿಕೆಶಿ ಭಾಗಿಯಾಗಬೇಕಿತ್ತು. ಕೊರೋನಾ ವೈರಸ್ ಭೀತಿ ಹಿನ್ನೆಲೆ ರಾಜ್ಯ ಸರ್ಕಾರ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸಬಾರದೆಂದು ಆದೇಶ ಹೊರಡಿಸಿರುವ ಹಿನ್ನೆಲೆ ನಾಳೆ ಡಿಕೆಶಿ ಭಾಗವಹಿಸಿಬೇಕಿದ್ದ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.








