ಸಿಲಿಂಡರ್ ಸ್ಪೋಟ ಕಟ್ಟಡ ಕುಸಿದು ಇಬ್ಬರ ಸಾವು 12 ಮಂದಿಗೆ ಗಾಯ
ಮಂಗಳವಾರ ಮುಂಜಾನೆ ತಮಿಳುನಾಡಿನ ಸೇಲಂ ಜಿಲ್ಲೆಯ ಕರುಂಗಲಪಟ್ಟಿಯಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಕಟ್ಟಡ ಕುಸಿದು ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ.
ಸ್ಫೋಟದ ಪರಿಣಾಮದಿಂದ ಅಕ್ಕಪಕ್ಕದ ಎರಡು ಮನೆಗಳೂ ಕುಸಿದಿದ್ದು, 12 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಅವಶೇಷಗಳಡಿಯಿಂದ 12 ಜನರನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ, ಮೂವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಶೇಷಗಳಡಿಯಲ್ಲಿ ಸಿಲುಕಿರುವವರನ್ನು ರಕ್ಷಿಸುವ ಪ್ರಯತ್ನ ಮುಂದುವರಿದಿದೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಕರ್ಮೇಘಂ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.








