ಕೇಂದ್ರ ಕೃಷಿ ರಾಜ್ಯ ಸಚಿವ ಕೈಲಾಶ್ ಚೌಧರಿಗೆ ಕೊರೋನಾ ಸೋಂಕು – ಆಸ್ಪತ್ರೆಗೆ ದಾಖಲು
ಜೈಪುರ, ಅಗಸ್ಟ್ 9: ಕೇಂದ್ರ ಕೃಷಿ ರಾಜ್ಯ ಸಚಿವ ಕೈಲಾಶ್ ಚೌಧರಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಅವರು ಜೋಧಪುರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಶನಿವಾರ ಟ್ವೀಟ್ ಮಾಡಿ ತಿಳಿಸಿದ್ದಾರೆ.
ಕೋವಿಡ್-19 ಸೋಂಕಿನ ರೋಗಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಶುಕ್ರವಾರ ರಾತ್ರಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದರು. ಶನಿವಾರ ಅವರಿಗೆ ಕೊರೋನಾ ಸೋಂಕು ತಗುಲಿರುವುದಾಗಿ ವರದಿ ಬಂದಿದೆ ಎಂದು ಚೌಧರಿ ಟ್ವೀಟ್ ಮಾಡಿದ್ದಾರೆ.

ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲ ಸ್ನೇಹಿತರು ಮತ್ತು ತಮ್ಮ ಕುಟುಂಬ ಸದಸ್ಯರು ಕ್ವಾರಂಟೈನ್ ಗೆ ಒಳಗಾಗಿ. ಜೊತೆಗೆ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ಮನವಿ ಮಾಡಿದ್ದಾರೆ.
ಸ್ವಲ್ಪ ಉಸಿರಾಟದ ಸಮಸ್ಯೆಯೊಂದಿಗೆ ಜ್ವರವಿದೆ. ಆಸ್ಪತ್ರೆಯ ವೈದ್ಯರ ಮೇಲ್ವಿಚಾರಣೆಯಲ್ಲಿ ನಾನು ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ತಮ್ಮ ಸಂಸದೀಯ ಕ್ಷೇತ್ರ ಜೈಸಲ್ಮೇರ್‌ಗೆ ಮೂರು ದಿನಗಳ ಭೇಟಿ ನೀಡಿದ್ದ ಕೇಂದ್ರ ಸಚಿವರು ಹಲವಾರು ಸ್ಥಳಗಳಿಗೆ ಭೇಟಿ ನೀಡಿದ್ದರು.








