ರಾಜ್ಯಸಭಾ ಎಲೆಕ್ಷನ್ – ನಾಮಪತ್ರ ಸಲ್ಲಿಸಿದ ನಿರ್ಮಲಾ ಸೀತಾರಾಮನ್ , ನಟ ಜಗ್ಗೇಶ್
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್ 10ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಅಂತಿಮ ದಿನವಾಗಿದ್ದು , ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ , ಚಿತ್ರನಟ ಜಗ್ಗೇಶ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಆರ್.ಅಶೋಕ್, ಜೆ.ಸಿ.ಮಾಧುಸ್ವಾಮಿ, ಮುನಿರತ್ನ ಮತ್ತಿತರರು ಉಪಸ್ಥಿತರಿದ್ದರು. ಬಿಜೆಪಿಯಿಂದ ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್ ಸಿರೋಯ ಕೂಡ ನಾಮಪತ್ರ ಸಲ್ಲಿಸಿದ್ದಾರೆ.
ಇದಕ್ಕೂ ಮುನ್ನ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಡಿ.ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಶಾಸಕರಾದ ಎಚ್.ಡಿ.ರೇವಣ್ಣ, ಎ.ಟಿ.ರಾಮಸ್ವಾಮಿ, ತಿಪ್ಪೇಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು. ಕಾಂಗ್ರೆಸ್ ಪಕ್ಷದಿಂದ ಜೈರಾಮ್ ರಮೇಶ್ ಹಾಗೂ ಮನ್ಸೂರ್ ಖಾನ್ ನಿನ್ನೆ ನಾಮಪತ್ರ ಸಲ್ಲಿಸಿದ್ದರು.
ಇದರೊಂದಿಗೆ ನಾಲ್ಕು ಸ್ಥಾನಗಳಿಗೆ ಆರು ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಮೂರು ಸ್ಥಾನಗಳಿಗೆ ಬಿಜೆಪಿಯ ಇಬ್ಬರು ಮತ್ತು ಕಾಂಗ್ರೆಸ್ ನ ಒಬ್ಬರು ಸುಲಭವಾಗಿ ಆಯ್ಕೆಯಾಗಲಿದ್ದಾರೆ. ಆದರೆ, ನಾಲ್ಕನೇ ಸ್ಥಾನಕ್ಕೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮಧ್ಯೆ ಪೈಪೋಟಿ ಏರ್ಪಟ್ಟಿದೆ. ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಶುಕ್ರವಾರ ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದ್ದು, ಜೂನ್ 10ರಂದು ಮತದಾನ ನಡೆಯಲಿದೆ.