ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನಾಗಿ ಹಿರಿಯ ಐಎಎಸ್ ಅಧಿಕಾರಿ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸದ್ಯ ಮುಖ್ಯ ಕಾರ್ಯದರ್ಶಿ ಆಗಿರುವ ಪಿ. ರವಿಕುಮಾರ್ ಅವರು ಮೇ 31ಕ್ಕೆ ನಿವೃತ್ತಿ ಆಗಲಿದ್ದಾರೆ. ಈ ಹಿನ್ನೆಲೆಯಲ್ಲಿ ವಂದಿತಾ ಶರ್ಮಾ ಅವರನ್ನು ಮೇ 31ರಿಂದ ಅನ್ವಯ ಆಗುವಂತೆ ಮುಖ್ಯ ಕಾರ್ಯದರ್ಶಿ ಹುದ್ದೆಗೆ ನೇಮಿಸಲಾಗಿದೆ. ಅಂದು ವಂದಿತಾ ಶರ್ಮ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ವಂದಿತಾ ಶರ್ಮಾ ಅವರು ಸದ್ಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತೆ ಹುದ್ದೆಯಲ್ಲಿದ್ದಾರೆ. ವಂದಿತಾ ಶರ್ಮ ಅವರು 1986ನೇ ಬ್ಯಾಚಿನ ಕರ್ನಾಟಕ ಕೇಡರ್ ಐ.ಎ.ಎಸ್ ಅಧಿಕಾರಿಯಾಗಿದ್ದಾರೆ.
ಜಿಲ್ಲಾಧಿಕಾರಿಯಾಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ, ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದು ಪ್ರಸ್ತುತ ಅಪರ ಮುಖ್ಯ ಕಾರ್ಯದರ್ಶಿ, ಮುಖ್ಯ ಅಭಿವೃದ್ಧಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆಯಾಗಿದ್ದಾರೆ. ತೆರೆಸಾ ಭಟ್ಟಾಚಾರ್ಯ, ಮಾಲತಿ ದಾಸ್ ಮತ್ತು ರತ್ನ ಪ್ರಭಾ ನಂತರ ಸರ್ಕಾರದ ಮುಖ್ಯ ಕಾರ್ಯದರ್ಶಿ ಸ್ಥಾನವನ್ನು ಅಲಂಕರಿಸುತ್ತಿದ್ದಾರೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಈ ಹಿಂದೆ 2000 ನೇ ಇಸವಿಯಲ್ಲಿ ತೆರೇಸಾ ಭಟ್ಟಾಚಾರ್ಯ, 2006 ನೇ ಇಸವಿಯಲ್ಲಿ ಮಾಲತಿ ದಾಸ್ ಹಾಗೂ 2017 ನೇ ಇಸವಿಯಲ್ಲಿ ಕೆ. ರತ್ನ ಪ್ರಭ ಅವರೂ ಅಲಂಕರಿಸಿದ್ದರು.