ನವದೆಹಲಿ: ಆರ್ ಸಿಬಿ ತಂಡವು ಮಹಿಳಾ ಪ್ರೀಮಿಯರ್ ಲೀಗ್ ನಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿದೆ. ಆರ್‌ಸಿಬಿ ಅಭಿಮಾನಿಗಳು ತಮ್ಮ ಸೋಶಿಯಲ್ ಮೀಡಿಯಾಗಳಲ್ಲಿ ಸಂತಸದ ಸಂದೇಶ ಹಾಕಿ ಸಂಭ್ರಮಿಸುತ್ತಿದ್ದಾರೆ.
ನಾಯಕಿ ಸ್ಮೃತಿ ಮಂಧಾನ, ಎಲ್ಲಿಸ್ ಪೆರ್ರಿ, ಕನ್ನಡತಿ ಶ್ರೇಯಾಂಕ ಪಾಟೀಲ್ ಆಟವನ್ನು ಅಭಿಮಾನಿಗಳು ಕೊಂಡಾಡುತ್ತಿದ್ದಾರೆ. ಕಿಂಗ್ ವಿರಾಟ್ ಕೊಹ್ಲಿ ವೀಡಿಯೋ ಕಾಲ್ ಮಾಡಿ ವನಿತೆಯರ ತಂಡದೊಂದಿಗೆ ಸಂತಸ ಹಂಚಿಕೊಂಡಿದ್ದಾರೆ. ನಾಯಕಿ ಸ್ಮೃತಿ ಮಂಧಾನ ಹಾಗೂ ಇತರ ಮಹಿಳಾ ಮಣಿಗಳಿಗೆ ಅಭಿನಂದನೆ ಸಲ್ಲಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್‌ನಲ್ಲೂ ʻಸೂಪರ್‌ವುಮನ್ʼ ಎಂಬ ಬರಹದೊಂದಿಗೆ ಆರ್‌ಸಿಬಿ ಚಾಂಪಿಯನ್ಸ್ ಫೋಟೋ ಹಂಚಿಕೊಂಡಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ 16 ಪ್ರಶಸ್ತಿಯ ಬರ ನೀಗಿಸಿದೆ. ಮಹಿಳಾ ಪ್ರೀಮಿಯರ್ ಲೀಗ್‌ನ ಮೊದಲ ಆವೃತ್ತಿಯಲ್ಲಿ ಹೀನಾಯ ಸೋಲು ಕಂಡಿದ್ದ ಆರ್ ಸಿಬಿ, 2ನೇ ಆವೃತ್ತಿಯಲ್ಲಿ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡಿದೆ. ಹೀಗಾಗಿ ಎಲ್ಲರೂ ಹೆಣ್ಮಕ್ಕಳೇ ಸ್ಟ್ರಾಂಗು ಗುರು ಎಂದು ಎಲ್ಲರೂ ಕೊಂಡಾಡುತ್ತಿದ್ದಾರೆ.
ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ 18.3 ಓವರ್‌ಗಲ್ಲಿ 113 ರನ್ ಗಳಿಸಿ ಆಲೌಟ್ ಆಗಿತ್ತು. 114 ರನ್ ಗಳ ಗುರಿ ಬೆನ್ನಟ್ಟಿದ ಬೆಂಗಳೂರು ತಂಡ 19.3 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 115 ರನ್ ಗಳಿಸಿ ಗೆಲುವು ಸಾಧಿಸಿತು. ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.