ಗದಗ : ಹೆಚ್.ವಿಶ್ವನಾಥ್ ಅನಾಥರಲ್ಲ, ಅವರು ನಮ್ಮ ಜೊತೆಯಲ್ಲೇ ಇದ್ದಾರೆ. ಬಿಜೆಪಿಗೆ ಬಂದವರಿಗೆ ಒಂದೊಂದು ಅವಕಾಶ ಆಗಿದೆ. ಅದೇ ರೀತಿ ಮುಂದಿನ ದಿನಗಳಲ್ಲಿ ವಿಶ್ವನಾಥ್ ಅವರಿಗೂ ಅವಕಾಶ ಸಿಗುತ್ತದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಗದಗದಲ್ಲಿ ವಿಶ್ವನಾಥ್ ಅವರಿಗೆ ಪರಿಷತ್ ಟಿಕೆಟ್ ತಪ್ಪಿದ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ವಿಶ್ವನಾಥ್ ಅನಾಥರಲ್ಲ, ಜೊತೆಯಲ್ಲೇ ಇದ್ದಾರೆ. ಬಂದವರಿಗೆ ಒಂದೊಂದು ಅವಕಾಶ ಆಗಿದೆ. ಅದೇ ರೀತಿ ಮುಂದಿನ ದಿನಗಳಲ್ಲಿ ವಿಶ್ವನಾಥ್ ಅವರಿಗೂ ಅವಕಾಶ ಸಿಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಮಗೆ ಹತ್ತೂ ಜನರಿಗೆ ಒಂದು ಬಾರಿ ಅವಕಾಶ ಆಯಿತು. ಇದೀಗ ಎಂಟಿಬಿ ನಾಗರಾಜ್ ಹಾಗೂ ಆರ್.ಶಂಕರಗೆ ಸ್ಥಾನ ನೀಡಲಾಗಿದೆ. ಮುನಿರತ್ನ ಹಾಗೂ ಪ್ರತಾಪ್ ಗೌಡ ಪಾಟೀಲ್ ಅವರಿಗೆ ಮುಂದಿನ ತಿಂಗಳು ಚುನಾವಣೆ ನಿಗದಿಯಾಗುತ್ತದೆ. ಎಲ್ಲರಿಗೂ ಹಂತ ಹಂತವಾಗಿ ಸ್ಥಾನ ಸಿಗುತ್ತದೆ ಎಂದು ತಿಳಿಸಿದರು.
ಇನ್ನು ಮುಖ್ಯಮಂತ್ರಿಗಳು ವಿಶ್ವನಾಥ್ ಅವರಿಗೂ ಎಂಎಲ್ ಸಿ ಸ್ಥಾನದ ಆಶ್ವಾಸನೆ ನೀಡಿದ್ದಾರೆ. ಯಾರಿಗೂ ಇಲ್ಲ ಎನ್ನುವ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿಗಳು ನುಡಿದಂತೆ ನಡೆದಿದ್ದಾರೆ. ವಿಶ್ವನಾಥ್ ಸಮೇತ ಮುಖ್ಯಮಂತ್ರಿಗಳ ಭೇಟಿ ಮಾಡಿ, ಈ ಬಗ್ಗೆ ಚರ್ಚಿಸಿದ್ದೇವೆ. ಮುಂದಿನ ಬಾರಿ ಅವಕಾಶ ಕೊಡುವುದಾಗಿ ಹೇಳಿದ್ದಾರೆ. ಇದಕ್ಕೆ ವಿಶ್ವನಾಥ್ ಸಹ ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ ಸೋಮಶೇಖರ್.