ಒಡಿಶಾದ ಬಾಲಸೋರ್ (Balasore) ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಹತ್ತಿರ ಮೂರು ರೈಲುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ದುರಂತದಲ್ಲಿ(Odisha Train Accident) 250ಕ್ಕೂ ಅಧಿಕ ಜನರು ಸಾವನ್ನಪ್ಪಿ, 900ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. ರೈಲು ದುರಂತದ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಸಂತಾಪ ಸೂಚಿಸಿದ್ದಾರೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣನ್ ಅವರ ಜೊತೆಗೆ ಘಟನೆ ಹಾಗೂ ಪರಿಸ್ಥಿತಿ ಬಗ್ಗೆ ಮಾತನಾಡಿದ್ದೇನೆ. ಪರಿಹಾರ ಕಾರ್ಯಗಳು ಭರದಿಂದ ಸಾಗುತ್ತಿದ್ದು, ಸಂತ್ರಸ್ತರಿಗೆ ಎಲ್ಲ ರೀತಿಯ ಬೆಂಬಲ ನೀಡಲಾಗುವುದು ಎಂದು ಟ್ವೀಟ್ ಮೂಲಕ ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. ಒಡಿಶಾದ ಬಾಲಸೋರ್ ಬಳಿ ನಡೆದಿರುವ ಕೋರಮಂಡಲ್ ಎಕ್ಸ್ಪ್ರೆಸ್ ರೈಲು ಅಪಘಾತದ ಸುದ್ದಿಯಿಂದ ದುಃಖಿತನಾಗಿದ್ದೇನೆ. ಮೃತರ ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ರಕ್ಷಣಾ ಕಾರ್ಯಗಳಿಗೆ ಅಗತ್ಯವಿರುವ ಎಲ್ಲಾ ಬೆಂಬಲವನ್ನು ನೀಡುವಂತೆ ನಾನು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಘಟನೆ ಕುರಿತು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ಕೇಂದ್ರ ಗೃಹ ಖಾತೆ ಸಚಿವ ಅಮಿತ್ ಶಾ ಕೂಡ ದುಃಖ ವ್ಯಕ್ತಪಡಿಸಿದ್ದಾರೆ.








