ಬೆಂಗಳೂರು: ರಾಮೇಶ್ವರ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಧಿಸಿದಂತೆ ಸಿಎಂ ಸಿದ್ದರಾಮಯ್ಯ ಸ್ಫೋಟಕ ಮಾಹಿತಿ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು, ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಸ್ಪೋಟದ ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಖಚಿತವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ ತನಿಖೆಯಲ್ಲಿ ಸಣ್ಣ ಪ್ರಮಾಣದ ಸುಧಾರಿತ ಸ್ಫೋಟಕವಾಗಿದೆ ಎಂದು ತಿಳಿದುಬಂದಿದೆ. ನಂತರ ಸಂಪೂರ್ಣ ವರದಿ ಗೊತ್ತಾಗಲಿದೆ ಎಂದು ಬರೆದುಕೊಂಡಿದ್ದಾರೆ.
ಅಲ್ಲದೇ, ಕ್ಯಾಶಿಯರ್ ಬಳಿ ಟೋಕನ್ ಪಡೆದು ಅಲ್ಲಿ ತಿಂಡಿ ತಿಂದಿರುವ ವ್ಯಕ್ತಿ, ಬ್ಯಾಗ್ ಇಟ್ಟು ಬಂದಿದ್ದಾನೆ ಎಂಬ ಮಾಹಿತಿ ದೊರೆತಿದೆ. ಘಟನೆಯಲ್ಲಿ ಸುಮಾರು ಎಂಟು ಜನರಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಸಿಟಿವಿ ಕ್ಯಾಮರಾ ಪರೀಕ್ಷಿಸಲಾಗುತ್ತಿದೆ. ಈ ಕುರಿತು ತನಿಖೆ ನಡೆಯುತ್ತಿದ್ದು ಗೃಹ ಸಚಿವರಿಗೆ ಸ್ಥಳಕ್ಕೆ ಭೇಟಿ ನೀಡುವಂತೆ ತಿಳಿಸಲಾಗಿದೆ ಎಂದು ಬರೆದಿದ್ದಾರೆ.