ಬೆಂಗಳೂರು : ಡಿ.ಜೆ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಫಿಕ್ಸ್ ಮಾಡಲು ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, “ಮಿಸ್ಟರ್ ಕಮಿಷನರ್ ಬಿ ಕೇರ್ ಪುಲ್. ಬಿಜೆಪಿ ಏಜೆಂಟ್ ರೀತಿ ನೀವು ಕೆಲಸ ಮಾಡಬಾರದು” ಎಂದು ಎಚ್ಚರಿಕೆ ರವಾನಿಸಿದ ಬಗ್ಗೆ ವೈದ್ಯಕೀಯ ಸಚಿವ ಡಾ.ಕೆ ಸುಧಾಕರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸುಧಾಕರ್, ಗಲಭೆ ಪ್ರಕರಣದ ಕಿಡಿಗೇಡಿಗಳ ವಿರುದ್ಧ ಪ್ರಾಮಾಣಿಕ ತನಿಖೆ ನಡೆಸುತ್ತಿರುವ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರಿಗೆ ಕೆಪಿಸಿಸಿ ಅಧ್ಯಕ್ಷರು ಸಾರ್ವಜನಿಕವಾಗಿ ಧಮ್ಕಿ ಹಾಕಿದ್ದಾರೆ ಮತ್ತು ಬಿಜೆಪಿ ಏಜೆಂಟ್ ಎಂದು ನಿಂದಿಸಿದ್ದಾರೆ. ಪ್ರಾಮಾಣಿಕ ತನಿಖೆಯ ಬಗ್ಗೆ ಇಷ್ಟು ಭಯ ಏಕೆ ಮಿಸ್ಟರ್ ಡಿಕೆ ಶಿವಕುಮಾರ್ ಅವರೇ? ಯಾರನ್ನು ರಕ್ಷಿಸಲು ಈ ಪ್ರಯತ್ನ ಎಂದು ಪ್ರಶ್ನಿಸಿದ್ದಾರೆ.
ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಮತ್ತು ದೇವರ ಜೀವನಹಳ್ಳಿ(ಡಿ.ಜೆ.ಹಳ್ಳಿ)ಯಲ್ಲಿ ನಡೆದ ದಾಂಧಲೆ ಪ್ರಕರಣದಲ್ಲಿ ಆಡಳಿತಾರೂಢ ಬಿಜೆಪಿ ನಾಯಕರು ಪೊಲೀಸರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದರು. ಪೊಲೀಸ್ ಅಧಿಕಾರಿಗಳು ಯಾವುದೇ ಒತ್ತಡಕ್ಕೆ ಮಣಿಯದೇ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಹೇಳಿದ್ದರು.