ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ (Uttara Kannada) ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಜನ -ಜೀವನ ಅಸ್ತವ್ಯಸ್ಥಗೊಂಡಿದೆ.
ಕಳೆದ ಒಂದು ವಾರದಿಂದ ಈ ಜಿಲ್ಲೆಗಳಲ್ಲಿ ಎಡೆಬಿಡದೆ ಮಳೆ (Rain) ಸುರಿಯುತ್ತಿದೆ. ಕಳೆದ 24 ಗಂಟೆಗಳಲ್ಲಿ ದೊಡ್ಡ ಪ್ರಮಾಣದ ಮಳೆ ಆಗಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆಯ ಅಬ್ಬರ ಮುಂದುವರೆದ ಹಿನ್ನೆಲೆಯ ದಕ್ಷಿಣ ಕನ್ನಡ, ಕುಮಟಾ ಹಾಗೂ ಹೊನ್ನಾವರ ತಾಲೂಕಿನ ಶಾಲಾ ಕಾಲೇಜುಗಳಿಗೆ ಮಂಗಳವಾರವೂ ರಜೆ ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಹೊನ್ನಾವರ ಎರಡು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಯಿಂದ ಶರಾವತಿ ಮತ್ತು ಗುಂಡಬಾಳ ನದಿ ಉಕ್ಕಿ ಹರಿಯುತ್ತಿವೆ. ಪ್ರವಾಹದಲ್ಲಿ ಸಿಲುಕಿದ್ದ ಕಡತೋಕ ಗ್ರಾಮದ 20ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿದೆ. ಹೀಗಾಗಿ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ & ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ.