ಶಿವಮೊಗ್ಗ: ಇತ್ತೀಚೆಗೆ ಮಂಡ್ಯದ ಮದ್ದೂರಿನಲ್ಲಿ ಗಣೇಶೋತ್ಸವದ ವೇಳೆ ಕಲ್ಲು ತೂರಾಟ ನಡೆದ ಘಟನೆ ಮತ್ತು ಭದ್ರಾವತಿಯ ಈದ್ ಮಿಲಾದ್ ಮೆರವಣಿಗೆಯಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ಆರೋಪಗಳ ನಡುವೆಯೇ, ಶಿವಮೊಗ್ಗದ ಭದ್ರಾವತಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ಅವರ ಹೇಳಿಕೆ ಹೊಸ ವಿವಾದಕ್ಕೆ ಕಾರಣವಾಗಿದೆ.
ಈದ್ ಮಿಲಾದ್ ಮೆರವಣಿಗೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಾಸಕ ಸಂಗಮೇಶ್, “ನಾನು ನಾಲ್ಕು ಬಾರಿ ಶಾಸಕನಾಗಿ ನಿಮ್ಮ ಮುಂದೆ ಮಾತನಾಡುತ್ತಿದ್ದೇನೆಂದರೆ ಅದಕ್ಕೆ ಮುಸ್ಲಿಂ ಬಾಂಧವರು ಕಾರಣ. ಮುಂದಿನ ದಿನಗಳಲ್ಲಿ ನನ್ನ ಪುತ್ರ ಗಣೇಶನ ಮೇಲೂ ನಿಮ್ಮ ಆಶೀರ್ವಾದ ಇರಲಿ. ನಿಮ್ಮ ಮನೆಯ ಮಗನಾಗಿ ನಾನು ಕೊನೆಯವರೆಗೂ ಇರುತ್ತೇನೆ. ಮುಂದಿನ ಜನ್ಮದಲ್ಲಿ ಹುಟ್ಟಿದ್ರೆ, ಮುಸ್ಲಿಂ ಆಗಿ ಹುಟ್ಟಬೇಕು ಅಂತ ಬಯಸ್ತೀನಿ,” ಎಂದು ಹೇಳಿದ್ದಾರೆ. ಅವರ ಈ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
ಭದ್ರಾವತಿಯಲ್ಲಿ ಪಾಕಿಸ್ತಾನ್ ಪರ ಘೋಷಣೆ: ವಿಡಿಯೋ ವೈರಲ್
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಕೆಲವರು ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತರೀಕೆರೆ ರಸ್ತೆಯಲ್ಲಿರುವ ಗಾಂಧಿ ವೃತ್ತದ ಬಳಿ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಡಿಜೆ ಸೌಂಡ್‌ಗೆ ಕುಣಿಯುತ್ತಿದ್ದಾಗ ಕೆಲವರು ಈ ಘೋಷಣೆಗಳನ್ನು ಕೂಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ವಿಡಿಯೋ ವೈರಲ್ ಆಗಿದ್ದು, ರಾಜ್ಯದಲ್ಲಿ ಕೋಮು ಸೌಹಾರ್ದದ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಭದ್ರಾವತಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಈ ಘಟನೆಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸವಾಲು ಸರ್ಕಾರದ ಮುಂದಿದೆ.








