ಬೆಂಗಳೂರು : ಸಾಂತ್ವನ ಕೇಂದ್ರ ( women help centres) ಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು. ಈ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ, ಮಹಿಳೆಯರು ಮತ್ತು ಮಕ್ಕಳ ವಿಷಯದಲ್ಲಿ ಸರ್ಕಾರ ಮಾತು ತಪ್ಪಿದೆ. ನೊಂದ ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳನ್ನು (women help centres) ಮುಂದುವರಿಸುವುದಾಗಿ ಹೇಳಿದ್ದ ರಾಜ್ಯ ಸರ್ಕಾರ, ಈ ಬಗ್ಗೆ ಮೌನಕ್ಕೆ ಶರಣಾಗಿದೆ.

ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳಿಗೆ ಸರ್ಕಾರ ಬೀಗ ಜಡಿಯಲ್ಲ ಎಂದ ಮುಖ್ಯಮಂತ್ರಿಗಳು ಇದುವರೆಗೂ ಸಾಂತ್ವನ ಕೇಂದ್ರಗಳಿಗೆ ಒಂದು ನಯಾಪೈಸೆ ಬಿಡುಗಡೆ ಮಾಡದಿರುವುದು ಕೋವಿಡ್-19 ಸಂಕಷ್ಟದಲ್ಲಿ ಸ್ತ್ರೀಯರಿಗೆ ಮತ್ತೊಂದು ಬರೆ ಎಳೆದಂತಾಗಿದೆ.
ಇದನ್ನೂ ಓದಿ : `ಕೊರೊನಾಗಮ’ ವಿದ್ಯಾಗಮ ನಿಲ್ಲಿಸಿ; ರಾಜ್ಯ ಸರ್ಕಾರಕ್ಕೆ ಹೆಚ್‍ಡಿಕೆ ಸೋಮವಾರವರೆಗೆ ಡೆಡ್‍ಲೈನ್..!
ಕೌಟುಂಬಿಕ ಹಿಂಸಾಚಾರ ನಿಯಂತ್ರಿಸಿ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವ ವಿಶ್ವಸಂಸ್ಥೆಯ ಆಶಯ ಬದಿಗೊತ್ತಿರುವುದು ಖಂಡನೀಯ. ಕಳೆದ ಎರಡು ದಶಕಗಳಿಂದ ಸಾಂತ್ವನ ಯೋಜನೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿನ ಸಾಂತ್ವನ ಕೇಂದ್ರಗಳು ಮಹಿಳೆಯರ ಸಮಸ್ಯೆಗಳಿಗೆ ಧ್ವನಿಯಾಗಿ,ಆತ್ಮವಿಶ್ವಾಸ ಮೂಡಿಸುತ್ತಿವೆ.
ರಾಜ್ಯದ ಪ್ರತಿ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಆರಂಭಗೊಂಡಿದ್ದ ಸಾಂತ್ವನ ಕೇಂದ್ರಗಳ ಸಿಬ್ಬಂದಿಗೂ ವೇತನವಿಲ್ಲ. ದೂರು ದುಮ್ಮಾನ ಪರಿಹರಿಸುವವರು ಯಾರು?

ಲಾಕ್ ಡೌನ್ ಕಾಲದಲ್ಲಿ ಸಾಂತ್ವನ ಕೇಂದ್ರಗಳನ್ನು ಮುಚ್ಚಿ, ಮದ್ಯದಂಗಡಿಗಳನ್ನು ತೆರೆದು ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳಕ್ಕೆ ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ. ಸಾಂತ್ವನ ಕೇಂದ್ರಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು. ಈ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದು ಟ್ವೀಟ್ ಮಾಡಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಅ.25ಕ್ಕೆ `ಕೈ’ ಹಿಡೀತಾರೆ ಶರತ್ ಬಚ್ಚೇಗೌಡ: `ಹಸ್ತದ ಜತೆ ಶರತ್’ ಫೋಟೋ ವೈರಲ್








