ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ರಾಜ್ಯಸಭಾ ಟಿಕೆಟ್ ದೊರಕದಿರುವ ವಿಚಾರಕ್ಕೆ ಶಾಸಕ ಬಸನಗೌಡ ಯತ್ನಾಳ್ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಯತ್ನಾಳ್, ದೇವೇಗೌಡರಿಗೆ ರಾಜ್ಯಸಭಾ ಸದಸ್ಯತ್ವ ನೀಡುವ ನಿರೀಕ್ಷೆ ಇತ್ತು. ಆದರೆ ಅವರಿಗೆ ಏಕೆ ಅವಕಾಶ ನೀಡಲಿಲ್ಲ ಎಂಬುದು ತಿಳಿದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿಕೊಳ್ಳುವುದಾಗಿ ತಿಳಿಸಿದರು.
ಹೇಗೆ ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಯಿತೋ, ಅದೇ ರೀತಿಯಲ್ಲಿ HD ದೇವೇಗೌಡರನ್ನು ಕೂಡ ರಾಜ್ಯಸಭೆಗೆ ಕಳುಹಿಸಬೇಕು. ಅವರು ಕರ್ನಾಟಕದ ಧ್ವನಿಯಾಗಿ ಸಂಸತ್ತಿನಲ್ಲಿ ಕಾರ್ಯನಿರ್ವಹಿಸಬಹುದು ಎಂದು ಯತ್ನಾಳ್ ಅಭಿಪ್ರಾಯಪಟ್ಟರು.
ದೀರ್ಘ ರಾಜಕೀಯ ಅನುಭವ ಹೊಂದಿರುವ ದೇವೇಗೌಡರ ಸೇವೆಯನ್ನು ರಾಷ್ಟ್ರ ಮಟ್ಟದಲ್ಲಿ ಬಳಸಿಕೊಳ್ಳಬೇಕು ಎಂದು ಹೇಳಿದ ಯತ್ನಾಳ್, ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿ ಕರ್ನಾಟಕದ ಹಿತಾಸಕ್ತಿಗಳಿಗೆ ನೆರವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.








