ಬೆಂಗಳೂರು: ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕ ಬೆಳಗಾವಿ, ಬಾಗಲಕೋಟೆ, ವಿಜಯಪುರ ಹಾಗೂ ಗದಗ ಜಿಲ್ಲೆಗಳಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಂಯೂರಪ್ಪ ಕೆಲವೇ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನ ಮೂಲಕ ಹೊರಟಿರುವ ಸಿಎಂ ಯಡಿಯೂರಪ್ಪ, ಬೆಳಗಾವಿಗೆ ಆಗಮಿಸಿದ್ದಾರೆ.
ವೈಮಾನಿಕ ಸಮೀಕ್ಷೆಗೂ ಮುನ್ನ ಬೆಳಗಾವಿಯಲ್ಲಿ ಸಿಎಂ ಮಹತ್ವದ ಸಭೆ ನಡೆಸಲಿದ್ದಾರೆ. ಬೆಳಗಾವಿ, ಧಾರವಾಡ ಜಿಲ್ಲೆಗಳ ಉಸ್ತುವಾರಿ ಸಚಿವರು, ಸಂಸದರು ಹಾಗೂ ಶಾಸಕರ ಜೊತೆ ಸಭೆ ನಡೆಸಲಿದ್ದಾರೆ. ಈ ವೇಳೆ ಎರಡು ಜಿಲ್ಲೆಗಳಲ್ಲಿ ಪ್ರವಾಹದಿಂದ ಆದ ಹಾನಿ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.
11.15ಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಸೇನಾಪಡೆಗೆ ಸೇರಿದ ವಿಶೇಷ ಹೆಲಿಕಾಪ್ಟರ್ನಲ್ಲಿ ಯಡಿಯೂರಪ್ಪ ನೆರೆ ಹಾನಿ ಬಗ್ಗೆ ಖುದ್ದು ಪರಿಶೀಲನೆ ನಡೆಸಲಿದ್ದಾರೆ. ಸಿಎಂ ಯಡಿಯೂರಪ್ಪ ಅವರಿಗೆ ಕಂದಾಯ ಸಚಿವ ಆರ್.ಅಶೋಕ್ ಸಾಥ್ ನೀಡಲಿದ್ದಾರೆ.
ಮಧ್ಯಾಹ್ನ 12.30ಕ್ಕೆ ವಿಜಯಪುರ ಜಿಲ್ಲೆಗೆ ಆಗಮಿಸಲಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಆಲಮಟ್ಟಿ ಜಲಾಶಯಕ್ಕೆ ಭೇಟಿ ನೀಡಲಿದ್ದಾರೆ. ಆಲಮಟ್ಟಿಯ ಅತಿಥಿಗೃಹದಲ್ಲಿ ಸಚಿವರು, ಸಂಸದರು ಹಾಗೂ ಶಾಸಕರ ಜತೆ ಸಭೆ ನಡೆಸಲಿರುವ ಬಿಎಸ್ವೈ, ಮಧ್ಯಾಹ್ನ 2.30ರ ವೇಳೆ ಆಲಮಟ್ಟಿಯಿಂದ ಹೊರಟು ವಿಜಯಪುರ ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಗೊಳಾದ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಮಧ್ಯಾಹ್ನ 3.30ರ ವೇಳೆಗೆ ವೈಮಾನಿಕ ಸಮೀಕ್ಷೆ ಮುಗಿಸಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದು ಅಲ್ಲಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ.








