ಮಾರ್ಚ್ 25 ಕ್ಕೆ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ…
ಇತ್ತೀಚೆಗೆ ನಡೆದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕೇಸರಿ ಪಕ್ಷವನ್ನ ಎರಡನೇ ಭಾರಿ ಅಧಿಕಾರಕ್ಕೆ ತರುವಲ್ಲಿ ಜಯಶಾಲಿಯಾಗಿರುವ ಯೋಗಿ ಆದಿತ್ಯಾನಾಥ್ ಎರಡನೇ ಭಾರಿ ಪ್ರಮಾಣ ವಚನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಮಾರ್ಚ್ 25 ರಂದು ತಮ್ಮ ಸತತ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.
50,000 ಆಸನಗಳ ಸಾಮರ್ಥ್ಯವಿರುವ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಪದಾಧಿಕಾರಿಗಳು ಸೇರಿದಂತೆ ಬಿಜೆಪಿಯ ಉನ್ನತ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಸಮಾರಂಭದಲ್ಲಿ ಮೂವರು ಮಾಜಿ ಮುಖ್ಯಮಂತ್ರಿಗಳು– ಬಹುಜನ ಸಮಾಜ ಪಕ್ಷ (ಬಿಎಸ್ಪಿ) ವರಿಷ್ಠೆ ಮಾಯಾವತಿ, ಸಮಾಜವಾದಿ ಪಕ್ಷದ (ಎಸ್ಪಿ) ಮುಲಾಯಂ ಸಿಂಗ್ ಯಾದವ್ ಮತ್ತು ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ಪ್ರಮುಖ ವಿರೋಧ ಪಕ್ಷದ ನಾಯಕರಿಗೂ ಆಹ್ವಾನವನ್ನು ನೀಡಲಾಗುವುದು.
ಕಾಂಗ್ರೆಸ್ ಕಡೆಯಿಂದ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಆಹ್ವಾನಿತರ ಪಟ್ಟಿಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದಲ್ಲದೆ, ಸುಮಾರು 45,000 ಅತಿಥಿಗಳು ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಾವಿರಾರು ಜನ ಕಲ್ಯಾಣ ಯೋಜನೆಗಳ ಫಲಾನುಭವಿಗಳಿಗೆ ಪಕ್ಷ ವ್ಯವಸ್ಥೆ ಕಲ್ಪಿಸಿದೆ.
ಮೂಲಗಳ ಪ್ರಕಾರ, ಮೋದಿ ಕ್ಯಾಬಿನೆಟ್ ಮಾದರಿಯಲ್ಲಿ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ 2.0 ಸರ್ಕಾರ ರಚನೆಯಾಗುವ ಸಾಧ್ಯತೆಯಿದೆ.