ಝೆಡ್ ಪಿ, ಟಿಪಿ ಮೀಸಲು : ಕೋರ್ಟ್ ಮೆಟ್ಟಿಲೇರಲು ಶಾಸಕರ ಚಿಂತನೆ
ಬೆಂಗಳೂರು: ರಾಜ್ಯದಲ್ಲಿ ಮುಂಬರುವ ತಾಲೂಕು ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಮೀಸಲಾತಿ ಪ್ರಕಟಿಸಿರುವುದು ಶಾಸಕರು ಅಸಮಾಧಾನಕ್ಕೆ ಕಾರಣವಾಗಿದೆ. ಈ ಕುರಿತು ಶಾಸಕರು ಸಿಎಂ ಎದುರು ಅಸಮಾಧಾನ ಹೊರ ಹಾಕಿದ್ದಾರೆ.
ರಾಜ್ಯ ಚುನಾವಣಾ ಆಯೋಗ ಅವೈಜ್ಞಾನಿಕವಾಗಿ ಮೀಸಲಾತಿ ಪ್ರಕಟಿಸಿದೆ ಎಂದಿರುವ ಶಾಸಕರು, ಈ ಕುರಿತು ಕೋರ್ಟ್ ನಲ್ಲಿ ಪ್ರಶ್ನಿಸುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇದೇ ವಿಚಾರವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಗೃಹ ಮತ್ತು ಕಾನೂನು ಸಚಿವ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಆಯೋಗ ಮೀಸಲಾತಿ ಪ್ರಕಟಿಸುವ ಮೊದಲು ಸರ್ಕಾರದ ಅಭಿಪ್ರಾಯ ಪಡೆಯಬೇಕಿತ್ತು. ಸರ್ಕಾರ ಶಾಸಕರ ಅಭಿಪ್ರಾಯ ಪಡೆಯಬೇಕಿತ್ತು ಎಂಬ ವಾದವನ್ನು ಶಾಸಕರು ಸಚಿವರು ಹಾಗೂ ಸಿಎಂ ಎದುರು ಮುಂದಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ತಾಲೂಕು ಹಾಗೂ ಜಿಲ್ಲಾ ಪಂಚಾಯತಿಗಳ ಚುನಾವಣೆಯನ್ನು ಆರು ತಿಂಗಳು ಮುಂದೂಡಿದ್ದು, ಡಿಸೆಂಬರ್ ನಲ್ಲಿ ಚುನಾವಣೆ ನಡೆಸಲು ತೀರ್ಮಾನಿಸಿದೆ.