ಬೆಂಗಳೂರು: ಕನ್ನಡಿಗರ ನೆಚ್ಚಿನ ಜೀ ಕನ್ನಡ ನ್ಯೂಸ್ (Zee Kannada News) ವಾಹಿನಿಯು ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿ ಆ ಮೂಲಕ ಕನ್ನಡ ನಾಡು-ನುಡಿ, ನೆಲ-ಜಲ ಹಾಗೂ ರಾಜ್ಯದ ಪ್ರಗತಿಗೆ ಶ್ರಮಿಸುತ್ತಿರುವ ಸಾಧಕರನ್ನು ಗೌರವಿಸಲು ವೀರ ಕನ್ನಡಿಗ ಅವಾರ್ಡ್ಸ್-2025 ಪ್ರದಾನ ಮಾಡುತ್ತಿದೆ.
ಇದೇ ಗುರುವಾರ ಸಂಜೆ 5 ಗಂಟೆಗೆ ಬೆಂಗಳೂರಿನ ಪ್ರತಿಷ್ಠಿತ ದಿ ಲಲಿತ್ ಅಶೋಕ್ ಹೋಟೆಲ್ನಲ್ಲಿ ಅದ್ದೂರಿ ಕಾರ್ಯಕ್ರಮ ನಡೆಯಲಿದೆ. ಉದ್ಯಮ, ಕ್ರೀಡೆ, ಆರೋಗ್ಯ, ಕೃಷಿ, ಸಿನಿಮಾ, ಕಲೆ, ಸಮಾಜ ಸೇವೆ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಶ್ರಮಿಸುತ್ತಿರುವ ಸಾಧಕರನ್ನು ಅಭಿನಂದಿಸುವ ಕಾರ್ಯಕ್ರಮ ಇದಾಗಿದೆ. ನಿವೃತ್ತ ನ್ಯಾಯಮೂರ್ತಿ ಹಾಗೂ ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ, ಹಿರಿಯ ಸಾಹಿತಿ ಮತ್ತು ಚಿಂತಕ ಡಾ. ಬರಗೂರು ರಾಮಚಂದ್ರಪ್ಪ, ಹಿರಿಯ ನಟಿ ಮತ್ತು ಮಾಜಿ ಎಂಎಲ್ಸಿ ಡಾ. ತಾರಾ ಅನುರಾಧ, ಭಾರತ ಮಹಿಳಾ ಕಬಡ್ಡಿ ತಂಡದ ಹೆಡ್ ಕೋಚ್ ತೇಜಸ್ವಿನಿ ಬಾಯಿ ವಿ, ಹಿರಿಯ ಪತ್ರಕರ್ತ ಮತ್ತು ರಾಜಕೀಯ ವಿಶ್ಲೇಷಕರಾದ ಶಶಿಧರ್ ಭಟ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಸಾರಿಗೆ ಮತ್ತು ಮಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್.ಕೆ.ಪಾಟೀಲ್, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್, ಕನ್ನಡ, ಸಂಸ್ಕೃತಿ ಮತ್ತು ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಇಸ್ರೋ ಮಾಜಿ ಅಧ್ಯಕ್ಷ ಡಾ. ಎ.ಎಸ್.ಕಿರಣ್ ಕುಮಾರ್, ಖ್ಯಾತ ನಟ ವಸಿಷ್ಠ ಸಿಂಹ, ಖ್ಯಾತ ನಟಿ ಸಪ್ತಮಿ ಗೌಡ ಭಾಗವಹಿಸಿ ಸಾಧಕರನ್ನು ಸನ್ಮಾನಿಸಲಿದ್ದಾರೆ. ಜೀ ಕನ್ನಡ ನ್ಯೂಸ್ ಸಂಪಾದಕ ರವಿ ಎಸ್. ಅವರು ಈ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ








